ಮುಡಾ ಹಗರಣ: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಲಾದ ಅರ್ಜಿ ವಿಚಾರಣೆ ಯನ್ನು ಹೈಕೋರ್ಟ್ ಜನವರಿ 27ಕ್ಕೆ ಮುಂದೂಡಿದೆ.

ಮುಡಾ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ತನಿಖಾ ವರದಿಯನ್ನು ಜನವರಿ 27ರೊಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಲೋಕಾ ಯುಕ್ತಕ್ಕೆ ಸೂಚಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಹಿರಿಯ ವಕೀಲ ರವಿವರ್ಮ ಕುಮಾರ್, ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು, ಅರ್ಜಿದಾರರ ಪರ ಮಣಿಂದರ್ ಸಿಂಗ್ ವಾದ ಮಂಡಿಸಿದರು.

ವಾದದ ವೇಳೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ದಿಂದ (ಮುಡಾ) ಮೂಲ ಕಡತಗಳು ನಾಪತ್ತೆಯಾಗಿವೆ ಎಂದು ಸಿಂಗ್ ಆರೋಪಿಸಿದರು.

ನಾವು ಎಲ್ಲವನ್ನೂ ನಿಭಾಯಿಸುತ್ತೇವೆ. ಆದರೆ, ಮೊದಲು ಲೋಕಾಯುಕ್ತರು ಇದುವರೆಗೆ ಮಾಡಿದ ತನಿಖೆಯ ಎಲ್ಲ ವಿವರಗಳನ್ನು ನ್ಯಾಯಾಲಯಕ್ಕೆ ಒದಗಿಸಬೇಕು ಎಂದು ನ್ಯಾಯಾಲಯ ಹೇಳಿದೆ.