ಮೈಸೂರು: ಕಳೆದ ಒಂದೆರಡು ದಿನಗಳಿಂದ ನಡೆದ ದರೋಡೆ ಪ್ರಕರಣಗಳು ಜನರಲ್ಲಿ ಆತಂಕ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.
ಸಾಂಸ್ಕೃತಿಕ ನಗರಿಯಲ್ಲಿ ಅಹಿತಕರ ಘಟನೆಗಳು ಸಂಭವಿಸಬಾರದೆಂಬ ಉದ್ದೇಶದಿಂದ ನಗರದಲ್ಲಿ ಮುನ್ನೆಚ್ಚರಿಕೆಗೆ ವಿಶೇಷ ಆಧ್ಯತೆ ನೀಡಲಾಗುತ್ತಿದೆ.
ನಗರದ ಹೃದಯ ಭಾಗದಲ್ಲಿರುವ ಅಶೋಕಾ ರಸ್ತೆಯಲ್ಲಿ ಪೊಲೀಸರೊಂದಿಗೆ ಪೆರೇಡ್ ಮಾಡಿದ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ಸಾರ್ವಜನಿಕರಿಗೆ, ವ್ಯಾಪಾರಸ್ಥರಿಗೆ ಅಭಯ ನೀಡಿದರು.ವಿವಿದ ಪೊಲೀಸ್ ಠಾಣೆಗಳ ನಿರೀಕ್ಷಕರು ಆಯುಕ್ತರಿಗೆ ಸಾಥ್ ನೀಡಿದರು.
ಚಿನ್ನಾಭರಣ ಅಂಗಡಿಗಳ ಭದ್ರತೆ ಹಾಗೂ ಸಿಸಿ ಕ್ಯಾಮರಾಗಳನ್ನ ಪರಿಶೀಲಿಸಿದರು.ಜ್ಯೂಯಲರಿ ಅಂಗಡಿ ಮಾಲೀಕರೊಂದಿಗೆ ಮಾತನಾಡಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಬಗ್ಗೆ ಸಲಹೆ ನೀಡಿದರು.
ನಗರದ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ಬ್ಯಾಂಕ್ ಗಳು ಎಟಿಎಂ ಗಳಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲನೆ ನಡೆಸಿದರು.
ವಿಶೇಷವಾಗಿ ಉದ್ಯಮಗಳು ಹಾಗೂ ಬ್ಯಾಂಕ್ ಗಳ ಮೇಲೆ ಹದ್ದಿನ ಕಣ್ಣಿಡಲು ಯೋಜನೆ ರೂಪಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್,ಡಿಸಿಪಿ ಮುತ್ತುರಾಜ್ ಹಾಗೂ ಜಾಹ್ನವಿ ಅವರ ನೇತೃತ್ವದಲ್ಲಿ ಎಲ್ಲಾ ಪೊಲೀಸ್ ಠಾಣೆಗಳ ಅಪರಾಧ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೆಲ ಸೂಚನೆಗಳನ್ನು ನೀಡಿದ್ದಾರೆ.
ಬ್ಯಾಂಕು ಗಳು ಹಾಗೂ ಉದ್ದಿಮೆಗಳ ಮೇಲೆ ವಿಶೇಷ ನಿಗಾ ವಹಿಸುವಂತೆ ತಿಳಿಸಿದ್ದಾರೆ.
ಇದೇ ವೇಳೆ ವಿವಿಧ ಬ್ಯಾಂಕ್ ಅಧಿಕಾರಿಗಳ ಜೊತೆ ಸಭೆ ನಡೆಸಿ ಕಟ್ಟೆಚ್ಚರ ವಹಿಸುವಂತೆ ಸಲಹೆ ನೀಡಿದ್ದಾರೆ,ಎಟಿಎಂ ಗಳಲ್ಲಿ ಸಿಸಿ ಕ್ಯಾಮರಾ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ನಿಗಾ ವಹಿಸುವಂತೆ ಆದೇಶಿಸಿದ್ದು, ಭದ್ರತೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ನಗರದಲ್ಲಿ ಎಲ್ಲೂ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಎಚ್ಚರಿಕೆಯಿಂದ ಇರುವಂತೆ ಕಮಿಷನರ್ ಸೂಚಿಸಿದ್ದಾರೆ.