ಡಾ.ರಾಜ್ ಅತ್ಯಂತ ಎತ್ತರದ ನಟ; ಅವರ ವಿನಯ ಅದಕ್ಕಿಂತ ಎತ್ತರ: ಸಿ.ಎಂ ಬಣ್ಣನೆ

ಬೆಂಗಳೂರು: ಡಾ.ರಾಜ್ ಅವರ ವಿನಯ, ಸಭ್ಯತೆ, ಸರಳತೆ ಇಡೀ ಮನುಷ್ಯ ಕುಲಕ್ಕೇ ಮಾದರಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು.

ರವೀಂದ್ರ ಕಲಾ ಕ್ಷೇತ್ರದಲ್ಲಿ ಕನ್ನಡ ಸೇನಾನಿ ಸಾ.ರಾ.ಗೋವಿಂದು ಅವರ ಅಭಿನಂದನ ಕಾರ್ಯಕ್ರಮದಲ್ಲಿ ಗೋವಿಂದು ಅವರನ್ನು ಸನ್ಮಾನಿಸಿ,ಅಭಿನಂದಿಸಿ ಸಿಎಂ ಮಾತನಾಡಿದರು.

ಡಾ.ರಾಜ್ ಕುಮಾರ್ ಅವರಿಗೆ ರಾಜ್ ಅವರೇ ಸಾಟಿ. ಅವರಿಗೆ ಸಾಟಿ ಆಗುವವರು ಯಾರೂ ಇನ್ನೂ ಬಂದಿಲ್ಲ ಎಂದು ಹೇಳಿದರು.

ಡಾ.ರಾಜ್ ಅವರ ಗೋಕಾಕ್ ಚಳವಳಿಯಲ್ಲಿ ನಾನೂ ಅವರ ಭಾಷಣ ಕೇಳಲು ಹೋಗಿದ್ದೆ. ರಾಜ್ ಅವರಿಂದಾಗಿ ಕನ್ನಡ ಹೆಚ್ಚು ಶಕ್ತಿಯುತವಾಗಿ ಬೆಳೆಯಿತು ಎಂದು ಸ್ಮರಿಸಿದರು.

ಸಾ.ರಾ.ಗೋವಿಂದು ಅವರು ರಾಜ್ ಕುಮಾರ್ ಸಂಘದ ಅಧ್ಯಕ್ಷರಾಗಿ ಮಾಡಿದ ಕೆಲಸಗಳು ಸ್ಮರಣೀಯ ಎಂದು ಸಿಎಂ ಶ್ಲಾಘಿಸಿದರು.ಗೋವಿಂದು ಅವರ ಬದುಕು ಅವರ ಹೋರಾಟಗಳ ಕಾರಣದಿಂದಾಗಿ ಸಾರ್ಥಕವಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಇದೇ ವೇಳೆ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಘೋಷಿಸಿದರು.

ಪಕ್ಕದ ರಾಜ್ಯಗಳಲ್ಲಿ ಪರಭಾಷಾ ಚಿತ್ರಗಳಿಗೆ ಟಿಕೆಟ್ ದರ ಎಷ್ಟಿದೆ ಎಂದು ಪರಿಶೀಲಿಸಿ ರಾಜ್ಯದಲ್ಲಿ ಅದಕ್ಕೆ ತಕ್ಕಂತೆ ನಿಯಂತ್ರಣ ತರುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.

ಕನ್ನಡ ಕೆಲಸಕ್ಕೆ ನಮ್ಮ ಸರ್ಕಾರ ಸದಾ ಮುಂದೆ ಇರುತ್ತದೆ.ಇದೇ 27 ರಂದು ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿ ಪುತ್ಥಳಿ ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ನಾನು ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾದಾಗ ಸಾ.ರಾ.ಗೋವಿಂದು ಮತ್ತು ಹಿರಿಯ ಪತ್ರಕರ್ತ ವೆಂಕಟೇಶ್ ಅವರ ಪರಿಚಯ ಮೊದಲ ಬಾರಿ ಆಯಿತು. ಇವರ ಕನ್ನಡ ಪರ ಹೋರಾಟದ ಬಗ್ಗೆ ಆಗಲೇ ನನಗೆ ಅಭಿಮಾನ ಇತ್ತು. ನನಗೆ ಕನ್ನಡ ನಾಡು, ನೆಲ, ಭಾಷೆ, ಸಂಸ್ಕೃತಿ ಬಗ್ಗೆ ಅಪಾರ ಪ್ರೀತಿ, ಅಭಿಮಾನ ಇದೆ. ಇದನ್ನು ಗ್ರಹಿಸಿಯೇ ಆಗಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು ನನ್ನನ್ನೇ ಕನ್ನಡ ಕಾವಲು ಸಮಿತಿಗೆ ಅಧ್ಯಕ್ಷನನ್ನಾಗಿಸಿದರು ಎಂದು ಸ್ಮರಿಸಿದರು.

ನಾನು ಕೇಂದ್ರ ಸರ್ಕಾರಕ್ಕೆ ಬರೆಯುವ ಪತ್ರಗಳನ್ನು ಹೊರತುಪಡಿಸಿ ಉಳಿದ ಎಲ್ಲದಕ್ಕೂ ಇವತ್ತಿಗೂ ಕನ್ನಡದಲ್ಲೇ ಸಹಿ ಹಾಕುತ್ತೀನಿ ಎಂದು ಸಿದ್ದರಾಮಯ್ಯ ತಿಳಿಸಿದರು.

ಬೇರೆ ಧರ್ಮ ಮತ್ತು ಇತರೆ ಭಾಷೆಗಳ ಬಗ್ಗೆ ಸಹಿಷ್ಣತೆ ಇರಬೇಕು. ನಮ್ಮ ಭಾಷೆ ಬಗ್ಗೆ ಅಭಿಮಾನ ಹೆಚ್ಚಾಗಿರಬೇಕು. ತಾಯಿ ಭಾಷೆ, ತಾಯಿ ನೆಲದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ತಿಳಿಸಿದರು.

ಸಾ.ರಾ.ಗೋವಿಂದು ಅವರು ರಾಜ್ ಕುಮಾರ್ ಸಂಘದ ಅಧ್ಯಕ್ಷರಾಗಿ ಕನ್ನಡ ಪರವಾದ ಹೋರಾಟಗಳನ್ನು ನಿರಂತರವಾಗಿ ನಡೆಸಿಕೊಂಡು ಬಂದಿದ್ದಾರೆ. ಇವರ ಹೋರಾಟದ ಫಲವಾಗಿ ಕನ್ನಡ ಚಿತ್ರರಂಗದ ಅಡಿಪಾಯ ಗಟ್ಟಿ ಆಯಿತು ಎಂದು ಶ್ಲಾಘಿಸಿದರು.

ಹಿರಿಯ ಸಾಹಿತಿ ಹಂಪನಾ ಅವರು ಅಧ್ಯಕ್ಷತೆ ವಹಿಸಿದ್ದರು.

ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಗೊ.ರು.ಚನ್ನಬಸಪ್ಪ, ನಾಡೋಜ ಬರಗೂರು ರಾಮಚಂದ್ರಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ್, ಹಿರಿಯ ಪತ್ರಕರ್ತರಾದ ವೆಂಕಟೇಶ್ ಸೇರಿದಂತೆ ಅನೇಕ ಗಣ್ಯರು ಪ್ರಮುಖರು ಉಪಸ್ಥಿತರಿದ್ದರು.