ಬೆಂಗಳೂರು: ಬಲವಂತದ ಸಾಲ ವಸೂಲಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಕಡಕ್ ಎಚ್ಚರಿಕೆ ನೀಡಿದರು.
ಸಿದ್ದರಾಮಯ್ಯ ಅವರು ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಶನಿವಾರ ಉನ್ನತ ಮಟ್ಟದ ಸಭೆ ನಡೆಸಿದರು.
ಫೈನಾನ್ಸ್ ಕಂಪನಿಯವರು ಕಡ್ಡಾಯ ನಿಯಮ ಪಾಲನೆ ಮಾಡಲೇಬೇಕು, ಬಲವಂತದ ಸಾಲ ವಸೂಲಿ ಮಾಡಿದರೆ ಕ್ರಿಮಿನಲ್ ಮೊಕದ್ದಮೆ ಎದುರಿಸಿ ಎಂದು ಎಚ್ಚರಿಸಿದರು.
ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಮೈಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವವರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ, ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾಲಗಾರರ ಹಿತವನ್ನು ಕಾಪಾಡುವ ದೃಷ್ಟಿಯಿಂದ ಶೀಘ್ರ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ರಚನೆ ಮಾಡಲಾಗುವುದು ಎಂದು ತಿಳಿಸಿದರು
ಬಲವಂತದ ಸಾಲ ವಸೂಲಾತಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ, ಈ ಕುರಿತು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಸಾಧ್ಯವಾಗುವಂತೆ ಈಗಿರುವ ಕಾನೂನು ಇನ್ನಷ್ಟು ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು,ಇದರಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ನೋಂದಣಿಯಾಗದ ಲೇವಾದೇವಿಗಾರರ ಮೇಲೆ ನಿಯಂತ್ರಣಕ್ಕೆ ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗುವುದು.
ಯಾರಾದರೂ ಮೈಕ್ರೋ ಫೈನಾನ್ಸ್ ವ್ಯಕ್ತಿಗಳಿಂದ ಕಿರುಕುಳ ಎದುರಿಸುತ್ತಿದ್ದರೆ ಸ್ಥಳೀಯವಾಗಿ ಪೊಲೀಸರಿಗೆ ದೂರು ನೀಡಬೇಕು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಳು ಸಭೆ ನಡೆಸಿ ಈ ಕುರಿತು ಜನರಿಗೆ ಸೂಕ್ತ ತಿಳುವಳಿಕೆ ನೀಡಬೇಕು
ಈ ಕುರಿತು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ಸೂಚನೆ ನೀಡಲಾಗಿದೆ ತೊಂದರೆಗೊಳಗಾದವರು ಇಲ್ಲಿ ದೂರು ನೀಡಬಹುದು ಎಂದು ಸಿದ್ದರಾಮಯ್ಯ ತಿಳಿಸಿದರು.