ಮೈಸೂರು: ಮೈಸೂರಲ್ಲಿ ಕೋವಿಡ್ ಚಿಕಿತ್ಸೆ ನೀಡುತ್ತಿರುವ ಖಾಸಗಿ ಆಸ್ಪತ್ರೆಗಳು ಸರ್ಕಾರಿ ಚಿಕಿತ್ಸಾ ದರಕ್ಕಿಂತ ಹೆಚ್ಚು ಪಡೆದರೆ ಅಂತಹ ಆಸ್ಪತ್ರೆಗಳಿಂದ ಹಣವನ್ನು ವಾಪಸ್ಸು ಪಡೆದು ಚಿಕಿತ್ಸೆ ಪಡೆದ ವ್ಯಕ್ತಿಗಳಿಗೆ ನೀಡಲು ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಡಹಬ್ಬ ಮೈಸೂರು ದಸರಾ ಹಾಗೂ ಜಿಲ್ಲೆಯ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಉನ್ನತ ಅಧಿಕಾರಿಗಳೊಂದಿಗೆ ಶುಕ್ರವಾರ ಸಂಜೆ ಸರ್ಕಾರಿ ಅತಿಥಿ ಗೃಹದಲ್ಲಿ ಸಭೆ ನಡೆಸಿ ಚರ್ಚಿಸಿದರು.
ಕೋವಿಡ್ ಚಿಕಿತ್ಸೆ ನೀಡುತ್ತಿರುವ ಖಾಸಗಿ ಆಸ್ಪತ್ರೆಗಳು ಸರ್ಕಾರಿ ಚಿಕಿತ್ಸಾ ದರಕ್ಕಿಂತ ಹೆಚ್ಚು ಪಡೆದರೆ ಅಂತಹ ಆಸ್ಪತ್ರೆಗಳಿಂದ ಹಣವನ್ನು ವಾಪಸ್ಸು ಪಡೆದು ಚಿಕಿತ್ಸೆ ಪಡೆದ ವ್ಯಕ್ತಿಗಳಿಗೆ ಬೆಂಗಳೂರಿನಲ್ಲಿ ನೀಡಲಾಗಿದೆ. ಅಂತಹದೆ ಕ್ರಮವನ್ನು ಮೈಸೂರು ಜಿಲ್ಲೆಯಲ್ಲೂ ಕೂಡ ಅನುಸರಿಸಬೇಕು ಎಂದು ಅಧಿಕಾರಿಗಳಿಗೆ ಬಿಎಸ್ ವೈ ಸೂಚಿಸಿದರು.
ಜಿಲ್ಲಾ ಕೋವಿಡ್ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಲು ಅಗತ್ಯವಿರುವ ನರ್ಸ್ ಹಾಗೂ ಡಿ ಗ್ರೂಪ್ ಸಿಬ್ಬಂದಿಯನ್ನು ಟೆಂಡರ್ ಮೂಲಕ ನೇಮಕಾತಿ ಮಾಡುವುದರಿಂದ ವಿಳಂಬವಾಗುತ್ತದೆ. ಆದ್ದರಿಂದ ನೇರ ಸಂದರ್ಶನದ (ವಾಕ್ ಇನ್) ಮೂಲಕ ನೇಮಿಸಿಕೊಳ್ಳಲು ಮುಂದಾಗಿ ಎಂದು ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಾಲಾಗಿದೆ. ಕೋವಿಡ್ ಪರೀಕ್ಷಾ ಪ್ರಮಾಣವನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
ಕೋವಿಡ್ ಹಿನ್ನೆಲೆ ಈ ಬಾರಿಯ ನಾಡಹಬ್ಬ ಮೈಸೂರು ದಸರೆಯನ್ನು ಸರಳವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಳೆದ ವರ್ಷಕ್ಕಿಂತ ಶೇ. 50ರಷ್ಟು ದೀಪಾಲಂಕಾರ ಕಡಿಮೆ ಮಾಡಿದ್ದೇವೆ. ತಾಂತ್ರಿಕ ಸಮಿತಿ ಸಲಹೆಯಂತೆ ಜನಸಂದಣಿ ಉಂಟಾದಂತೆ ಅನೇಕ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವ ಮೂಲಕ ದಸರೆಯನ್ನು ಆಚರಿಸಲಾಗುತ್ತಿದೆ ಎಂದರು.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳು ಈ ತಿಂಗಳು 400 ಹಾಸಿಗೆಯನ್ನು ನೀಡಲು ಒಪ್ಪಿಗೆ ಸೂಚಿಸಿವೆ. ಇದರಿಂದ ಕೊರೊನಾ ಸೋಂಕಿತರಿಗೆ ಚಿಕಿತ್ಸೆಗೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಬಿ.ಹರ್ಷವರ್ಧನ, ಸಂಸದ ಪ್ರತಾಪಸಿಂಹ, ವಿಧಾನ ಪರಿಷತ್ ಸದಸ್ಯ ಅಡಗೂರು ಹೆಚ್.ವಿಶ್ವನಾಥ್, ಮೇಯರ್ ತಸ್ನೀಂ, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ಆರೋಗ್ಯ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಡಾ.ಜಾವೇದ್ ಅಕ್ತರ್, ಆಯುಕ್ತ ಪಂಕಜ್‍ಕುಮಾರ್ ಪಾಂಡೆ, ನಗರ ಪೆÇಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಅಪರ ಜಿಲ್ಲಾಧಿಕಾರಿ ಬಿ.ಎಸ್.ಮಂಜುನಾಥ್ ಸ್ವಾಮಿ ಇನ್ನಿತರರು ಉಪಸ್ಥಿತರಿದ್ದರು.