ಮೈಸೂರು: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸರಳ, ಸಾಂಪ್ರದಾಯಿಕವಾಗಿ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಶನಿವಾರ ಚಾಲನೆ ನೀಡಲಾಯಿತು.
ಚಾಮುಂಡಿಬೆಟ್ಟದಲ್ಲಿ ಮೈಸೂರು ದಸರಾ ಮಹೋತ್ಸವಕ್ಕೆ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರು ಬೆಳಗ್ಗೆ 7.45ರಿಂದ 8.15ರ ಶುಭ ಮುಹೂರ್ತದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾಕ್ಕೆ ಮಹೋತ್ಸವಕ್ಕೆ ಚಾಲನೆ ನೀಡಿದರು.
ಸರಳ ದಸರಾಗೆ ಡಾ. ಮಂಜುನಾಥ್ ಅವರು ಚಾಲನೆ ನೀಡಿದ ನಂತರ ಕೊರೊನಾ ಸೋಂಕಿನ ಸಂದರ್ಭದಲ್ಲಿ ಸೇವೆ ಸಲ್ಲಿಸಿದ ವೈದ್ಯಾಧಿಕಾರಿ ಡಾ. ಟಿ.ಆರ್. ನವೀನ್, ಹಿರಿಯ ನರ್ಸ್ ರುಕ್ಮಿಣಿ, ಪೆÇೀಲಿಸ್ ಪೇದೆ ಪಿ.ಕುಮಾರ್, ಅನಾಥ ಶವಗಳ ಮುಕ್ತಿದಾತ ಅಯೂಬ್ ಅಹಮದ್, ಪೌರ ಕಾರ್ಮಿಕ ಮಹಿಳೆ ಮರಗಮ್ಮ ಮತ್ತು ಆಶಾ ಕಾರ್ಯಕರ್ತೆ ನೂರ್ ಜಾನ್ ಅವರಿಗೆ ಸನ್ಮಾನ ಮಾಡಲಾಯಿತು.
ಸನ್ಮಾನಿತರ ಪೈಕಿ ಪೆÇೀಲಿಸ್ ಪೇದೆ ಪಿ.ಕುಮಾರ್ ಅವರ ಬದಲಾಗಿ ಅವರ ಪತ್ನಿ ಸನ್ಮಾನ ಸ್ವೀಕರಿಸಿದರು.
ನವರಾತ್ರಿಯ ಮೊದಲ ದಿನವಾದ ಇಂದು ಮುಂಜಾನೆ 4.30ರಿಂದಲೇ ಚಾಮುಂಡಿ ದೇವಸ್ಥಾನದಲ್ಲಿ ರುದ್ರಾಭಿಷೇಕ, ಪಂಚಾಮೃತಾಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆದವು.
ನಂತರ ಮೂಲ ಚಾಮುಂಡೇಶ್ವರಿ ದೇವಿಗೆ ಹಂಸವಾಹಿನಿ ಅಲಂಕಾರ ಮಾಡಿ ಮಹಾ ಮಂಗಳಾರತಿ ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಸಚಿವರಾದ ಎಸ್ ಟಿ ಸೋಮಶೇಖರ್, ಬಿ. ಸಿ. ಪಾಟೀಲ್, ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ರಾಮದಾಸ್, ನಾಗೇಂದ್ರ, ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್, ಮೇಯರ್ ತಸ್ಲೀಂ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಇಂದಿನ ಕಾರ್ಯಕ್ರಮದಲ್ಲಿ 200 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು.