ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಈಗ ಕೈಗೊಂಡಿರುವ ಎಲ್ಲಾ ನೇಮಕಾತಿ ಪರೀಕ್ಷೆಗಳನ್ನು ಮುಂದೂಡ ಬೇಕೆಂದು ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು; ನವೆಂಬರ್ 15ರಂದು ಕೆಪಿಎಸ್ಸಿ ವತಿಯಿಂದ ನಡೆಯಲಿರುವ 319 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಮುಂದೂಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಕೆಪಿಎಸ್ಸಿಯಲ್ಲಿ ಕಳೆದ 3-4 ವರ್ಷಗಳಿಂದ ನಡೆದಿರುವ ಪರೀಕ್ಷೆ, ನೇಮಕಾತಿ ಅಕ್ರಮಗಳ ಬಗ್ಗೆ ಇಡಿ, ಸಿಐಡಿ ತನಿಖೆಗಳು ನಡೆಯುತ್ತಿವೆ ಹಾಗೂ ಹೈಕೋರ್ಟ್ ಸೂಚನೆಯಂತೆ ಎಸ್ಐಟಿ ತನಿಖೆ ನಡೆಸುತ್ತಿದೆ, ಹಣದ ವಹಿವಾಟು ನಡೆದಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಆ ಸಂಸ್ಥೆ ಪಾರದರ್ಶಕವಾಗಿ, ಪ್ರಾಮಾಣಿಕವಾಗಿ ಪರೀಕ್ಷೆ ನಡೆಸಿ ನೇಮಕಾತಿ ಮಾಡುತ್ತದೆ ಎಂಬ ನಂಬಿಕೆ ನನಗಿಲ್ಲ ಎಂದು ಹೇಳಿದರು.
ಸಂಸ್ಥೆಯನ್ನು ಸುಧಾರಿಸಲು ಮಾಜಿ ಮಂತ್ರಿಗಳಾದ ಆರ್.ವಿ.ದೇಶಪಾಂಡೆ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಸಮಿತಿಯು ಇನ್ನೂ ವರದಿ ನೀಡಿಲ್ಲ. ಫ್ರೀಡಂ ಪಾರ್ಕ್ ನಲ್ಲಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಇಂತಹ ಗೊಂದಲದ ವಾತಾವರಣದಲ್ಲಿ ಪರೀಕ್ಷೆ ನಡೆಸುವುದರಿಂದ ಪ್ರಾಮಾಣಿಕ, ಪ್ರತಿಭಾವಂತ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ.,ಆದ್ದರಿಂದ ಸಂಸ್ಥೆಯನ್ನು ಸಂಪೂರ್ಣವಾಗಿ ಶುದ್ಧೀಕರಿಸಿ, ಅಲ್ಲಿ ಪಾರದರ್ಶಕತೆ ತಂದ ನಂತರವೇ ಪರೀಕ್ಷೆ ನಡೆಸಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದರು.
ಬರಗಾಲದಿಂದ ರೈತರು ಕಂಗಾಲಾಗಿದ್ದರೂ, ಬೆಳೆ ವಿಮೆ ವಿಚಾರದಲ್ಲಿ ರೈತರಿಗೆ ದೊಡ್ಡ ಮೋಸವಾಗುತ್ತಿದೆ, ರೈತರು ವಂತಿಗೆ ಕಟ್ಟಿದ್ದರೂ ವಿಮಾ ಕಂಪನಿಗಳು ಅವರಿಗೆ ವಂಚಿಸುತ್ತಿವೆ ಹಾಗೂ ರಾಜ್ಯ ಸರ್ಕಾರವು ತನ್ನ ಪಾಲಿನ ಅನುದಾನ ಅಥವಾ ವಂತಿಗೆ ಹಣವನ್ನು ಪಾವತಿಸದೆ ಸಂಪೂರ್ಣ ನಿಷ್ಕ್ರಿಯವಾಗಿದೆ ಟೀಕಿಸಿದರು.
ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣವಾಗಿ ಹದಗೆಟ್ಟಿದ್ದು, ಬಸ್ ದರ ಏರಿಕೆ ಖಂಡಿಸಿ ಜನರ ಆಕ್ರೋಶ ಭುಗಿಲೆದ್ದಾಗ ಗಮನ ಬೇರೆಡೆ ಸೆಳೆಯಲು ಮುಖ್ಯಮಂತ್ರಿಗಳು ದಿಢೀರನೆ ಪತ್ರಿಕಾಗೋಷ್ಠಿ ಕರೆದು ರೈತರಿಗೆ 2,500 ಪರಿಹಾರ ಘೋಷಿಸಿದರು. ಸಚಿವ ಸಂಪುಟ ಸಭೆಯಲ್ಲಿ 26,000 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ, ಆದರೆ ಈಗಾಗಲೇ ಕಾಮಗಾರಿ ಮುಗಿಸಿರುವ ಗುತ್ತಿಗೆದಾರರಿಗೆ 39,000 ಕೋಟಿ ಬಾಕಿ ಉಳಿಸಿಕೊಳ್ಳಲಾಗಿದೆ. ಹಳೆಯ ಬಾಕಿ ನೀಡದೆ ಹೊಸ ಯೋಜನೆಗಳನ್ನು ಘೋಷಿಸುತ್ತಿರುವುದು ಹಾಸ್ಯಾಸ್ಪದ ಎಂದು ಸಚಿವರು ಕುಟುಕಿದರು.
ರಾಮನಗರದಲ್ಲಿ ಕಾಂಗ್ರೆಸ್ ನಾಯಕರು ಕಾರ್ಯಕ್ರಮವೊಂದನ್ನು ಮಾಡಿ, ಅಲ್ಲಿನ ಮೆಡಿಕಲ್ ಕಾಲೇಜುಗಳೆಲ್ಲ ತಮ್ಮದೇ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿರುವುದನ್ನು ಸಚಿವರು ಲೇವಡಿ ಮಾಡಿದರು.
ದ್ವೇಷದ ರಾಜಕಾರಣ, ಜಾತಿ ರಾಜಕಾರಣ ಮತ್ತು ಎಸ್ಐಟಿ ಮುಂತಾದವುಗಳ ದುರ್ಬಳಕೆಯ ಮೂಲಕ ಸೇಡಿನ ರಾಜಕಾರಣ ಮಾಡುವುದನ್ನು ಬಿಟ್ಟು, ರಾಜ್ಯದ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ಕುಮಾರಸ್ವಾಮಿ ಸಲಹೆ ನೀಡಿದರು.
ಜತೆಗೆ ಸರ್ಕಾರ ಒಳ್ಳೆಯ ಕೆಲಸ ಮಾಡಿದರೆ ತಾವೂ ಬೆಂಬಲ ನೀಡುವುದಾಗಿ ಭರವಸೆ ನೀಡಿದರು
ಇದೇ ವೇಳೆ ಕುಣಿಗಲ್ ವಿಧಾನಸಭಾ ಕ್ಷೇತ್ರದ 20ಕ್ಕೂ ಹೆಚ್ಚು ಪ್ರಮುಖ ಕಾಂಗ್ರೆಸ್ ಮುಖಂಡರು ಹೆಚ್.ಡಿ. ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಡಿ ನಾಗರಾಜಯ್ಯ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಕುಣಿಗಲ್ ಕ್ಷೇತ್ರದ ಹಿರಿಯ ಮುಖಂಡರಾದ ರವಿ, ಜಗದೀಶ್ ಹಾಗೂ ಗ್ರೇಟರ್ ಬೆಂಗಳೂರು ಜೆಡಿಎಸ್ ಅಧ್ಯಕ್ಷರಾದ ಹೆಚ್.ಎಂ. ರಮೇಶ್ ಗೌಡ ಮುಂತಾದವರು ಉಪಸ್ಥಿತರಿದ್ದರು.

