ಮೈಸೂರು, ಅ. 17- ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಅವರು ಶನಿವಾರ ಉದ್ಘಾಟಿಸುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಿದರು.
ನಂತರ ಡಾ. ಮಂಜುನಾಥ್ ಮಾತನಾಡಿ, ನಾನು ದೇವರಲ್ಲಿ ನನಗಾಗಿ ನನ್ನ ಕುಟಂಬಕ್ಕಾಗಿ ಏನನ್ನೂ ಕೇಳಲಿಲ್ಲ. ನಾನು ದೇವರ ಬಳಿ 3 ಬೇಡಿಕೆ ಇಟ್ಟಿದ್ದೇನೆ. ಒಂದು ಜನ, ರಾಜ್ಯ, ದೇಶ, ವಿಶ್ವ ಕರೊನಾ ಮುಕ್ತವಾಗಲಿ, ಎರಡನೆಯದು ಬೇಗ ಲಸಿಕೆ ಸಿಗಲಿ ಮೂರನೆಯದು ಜಲ ಪ್ರಳಯದಿಂದ ಮುಕ್ತಿ ಸಿಗಲಿ ಎಂದು ತಿಳಿಸಿದರು.
ಸಮಾಜವನ್ನು ಜಾಲಾಡುತ್ತಿರುವ ಸಾಮಾಜಿಕ ಜಾಲತಾಣ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದೆ. ಜನರ ದಿಕ್ಕು ತಪ್ಪಿಸುತ್ತಿದೆ. ಕೊರೋನಾ ಸೇರಿದಂತೆ ಹಲವು ವಿಷಯಗಳ ಬಗ್ಗೆ ತಪ್ಪು ಮಾಹಿತಿಗಳು ರವಾನೆಯಾಗುತ್ತಿದೆ. ಇಂಥದ್ದು ನಿಲ್ಲಬೇಕಿದೆ ಎಂದು ಡಾ. ಮಂಜುನಾಥ್ ಹೇಳಿದರು.
ದಸರಾ ಮಹೋತ್ಸವದ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಉದ್ಘಾಟನೆ ಮಾಡಲು ವೈದ್ಯರಿಗೆ ಅವಕಾಶ ಮಾಡಿಕೊಟ್ಟ ಸರ್ಕಾರ ಹಾಗೂ ಮುಖ್ಯಮಂತ್ರಿಗಳಿಗೆ ಧನ್ಯವಾದ ಎಂದು ಹೇಳಿದರು.
ದಸರಾ ಮಹೋತ್ಸವವು ನಾಡಿನ ಭಾಷೆ, ಸಂಸ್ಕೃತಿ, ಸಂಪ್ರದಾಯ ಹಾಗೂ ದೇಶೀಯತೆ ಯನ್ನು ಸಾರುತ್ತದೆ ಎಂದು ತಿಳಿಸಿದರು.
ಪರಿಸರವನ್ನು ನಾವು ಬೆಳೆಸಬೇಕು. ಅದನ್ನು ಹಾಳು ಮಾಡಿದರೆ ಹೇಗೆ ಸಂಕಷ್ಟ ಎದುರಾಗುತ್ತದೆ ಎಂಬುದನ್ನು ಇಂದು ಪ್ರಕೃತಿ ತೋರಿಸುತ್ತಿದೆ ಎಮದು ಅವರು ತಿಳಿಸಿದರು.
ನಾವು ಶುಚಿತ್ವವನ್ನು ಕಾಪಾಡಿಕೊಳ್ಳಬೇಕು, ಸ್ಯಾನಿಟೇಷನ್ ಮಾಡಿಕೊಳ್ಳಬೇಕು, ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಬೇಕು. ಮಾಸ್ಕ್ ಹಾಕಿಕೊಳ್ಳಬೇಕು ಎಂದು ಡಾ. ಮಂಜುನಾಥ್ ಹೇಳಿದರು.
ನಾವು ಸೋಂಕಿತರಿಂದ ದೈಹಿಕವಾಗಿ ಮಾತ್ರ ದೂರವಿರಬೇಕು, ಮಾನಸಿಕವಾಗಲ್ಲ ಎಂದು ಡಾ. ಮಂಜುನಾಥ್ ತಿಳಿಸಿದರು.
ಇಂದು ವೈದ್ಯರಿಗೆ ಅಭದ್ರತೆ ಕಾಡುತ್ತಿದೆ. ಅವರು ವೃತ್ತಿಯ ಒತ್ತಡ, ಮಾನಸಿಕ ಒತ್ತಡ ಹಾಗೂ ದೈಹಿಕ ಒತ್ತಡಗಳನ್ನು ಎದುರಿಸುತ್ತಿದ್ದಾರೆ. ಹಲ್ಲೆ ಭೀತಿಯಿಂದ ಗ್ರಾಮೀಣ ಭಾಗಗಳಿಗೆ ವೈದ್ಯರು ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಅವರಿಗೆ ಸೌಹಾರ್ದಯುತ ವಾತಾವರಣ ಹಾಗೂ ಭದ್ರತೆಯನ್ನು ಸರ್ಕಾರ ಕಲ್ಪಿಸಬೇಕಿದೆ ಎಂದು ಡಾ. ಮಂಜುನಾಥ್ ತಿಳಿಸಿದರು.
ಯಾರು ಎಷ್ಟೇ ವಿದ್ಯೆ ಪಡೆದಿದ್ದರೂ ನಮ್ಮ ಸಂಸ್ಕಾರ ಬಹಳ ಮುಖ್ಯವಾಗುತ್ತದೆ. ನಾವು ಸಹ ಜನರ ಜೀವ ಮೊದಲು ಆಮೇಲೆ ಶುಲ್ಕ ಎಂಬ ನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡಲಾಗುತ್ತಿದೆ ಎಂದು ಡಾ. ಮಂಜುನಾಥ್ ತಿಳಿಸಿದರು.