ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: ಅಧಿಕಾರಿಗಳಿಗೆ ಶಾಕ್

ಮೈಸೂರು: ರಾಜ್ಯದ ಹಲವೆಡೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ‌ ಪೊಲೀಸರು ದಾಳಿ ನಡೆಸಿ,
ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.

ಅಕ್ರಮ ಆಸ್ತಿ ಮಾಡಿರುವ ಆರೋಪದ ಮೇಲೆ ಹುಬ್ಬಳ್ಳಿ,ಚಿತ್ರದುರ್ಗ, ಮೈಸೂರು ಮತ್ತಿತರ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲೂ ದಾಳಿ ನಡೆದಿದ್ದು, ಚಾಮರಾಜನಗರ ಲೋಕಾಯುಕ್ತ ಇನ್ಸ್‌ಪೆಕ್ಟರ್ ಸುಧಾಕರ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಅರಣ್ಯ ಭವನದಲ್ಲಿ ಆರ್ ಎಫ್ ಒ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸುರೇಂದ್ರ ಅವರ ಕಚೇರಿ ಹಾಗೂ ರಾಂಪುರದ ನಿವಾಸದಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಹೆಚ್.ಡಿ. ಕೋಟೆಯಲ್ಲಿರುವ ಸುರೇಂದ್ರ ಅವರ ಸಹೋದರನ ನಿವಾಸದ ಮೇಲೂ ದಾಳಿ ನಡೆದಿದೆ.

ಬೆಳಗ್ಗೆ 6 ಗಂಟೆಯಿಂದ ಆಸ್ತಿ ಮತ್ತು ಹಣಕಾಸು ವ್ಯವಹಾರಗಳ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಹುಬ್ಬಳ್ಳಿ: ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ನಗರ ಡಿಪೋದಲ್ಲಿ ಚಾಲಕ ಕಂ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ವಾಯುವ್ಯ ಕರ್ನಾಟಕ ರಾಜ್ಯ‌ ರಸ್ತೆ ಸಾರಿಗೆ ಸಂಸ್ಥೆ ನೌಕರ ಷಡಕ್ಷರಯ್ಯ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಧಾರವಾಡ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ಬಾಗಲಕೋಟೆ: ಹೆಚ್ಚಿನ ಪ್ರಮಾಣದ ಆಸ್ತಿ ಗಳಿಸಿರುವ ಆರೋಪದ ಹಿನ್ನೆಲೆಯಲ್ಲಿ ಜಮಖಂಡಿ ತಾಲ್ಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಸಂಜೀವ್ ಹಿಪ್ಪರಗಿ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶೋಧನೆ ಕೈಗೊಂಡಿದ್ದಾರೆ.

ಬಾಗಲಕೋಟೆ, ಬೆಳಗಾವಿ ಹಾಗೂ ಕೊಪ್ಪಳ ಜಿಲ್ಲೆಗಳ ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತರ ದಾಳಿ: ಇಬ್ಬರು ಸರ್ಕಾರಿ ಅಧಿಕಾರಿಗಳ ಮನೆ, ಆಸ್ಪತ್ರೆಯಲ್ಲಿ ಪರಿಶೀಲನೆ
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ: ಜಿಲ್ಲಾ ಸರ್ಜನ್ ಡಾ. ರವೀಂದ್ರ ಹಾಗೂ ತೂಕ ಮತ್ತು ಅಳತೆ ಇಲಾಖೆ ಇನ್‌ಸ್ಪೆಕ್ಟರ್ ವೆಂಕಟೇಶ್ ನಿವಾಸಗಳ ಮೇಲೆ ದಾಳಿ

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲೂ ಬುಧವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಇಬ್ಬರು ಸರ್ಕಾರಿ ಅಧಿಕಾರಿಗಳಿಗೆ ಚಳಿ ಬಿಡಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ರವೀಂದ್ರ ಹಾಗೂ ತೂಕ ಮತ್ತು ಅಳತೆ ಇಲಾಖೆ ಇನ್‌ಸ್ಪೆಕ್ಟರ್ ವೆಂಕಟೇಶ್ ಅವರ‌ ನಿವಸದ ಮೇಲೆ ಲೋಕಾಯುಕ್ತರು ದಾಳಿ ನಡೆಸಿ ಪರಿಶೀಲಿಸಿದರು.

ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕಲಾವತಿ ಅವರ ನೇತೃತ್ವದ ತಂಡಗಳು ಕಾರ್ಯಾಚರಣೆ ನಡೆಸಿವೆ.