ನವದೆಹಲಿ: ಧಾರವಾಡ ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಅವರು ಮತ್ತೆ ಜೈಲು ಸೇರಬೇಕಿದೆ.
ಹೈಕೋರ್ಟ್ ನಿಂದ ಜಾಮೀನು ಪಡೆದು ಹೊರಗೆ ಆರಾಮಾಗಿದ್ದ ವಿನಯ್ ಕುಲಕರ್ಣಿಗೆ ಮತ್ತೆ ಜೈಲು ಪಾಲಾಗಲಿದ್ದಾರೆ.
ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿ,ಎರಡು ವಾರಗಳಲ್ಲಿ ಸೆಷನ್ಸ್ ಕೋರ್ಟ್ಗೆ ಶರಣಾಗುವಂತೆ ಸುಪ್ರೀಂ ಸೂಚಿಸಿದೆ.ನ್ಯಾ. ಪ್ರಶಾಂತ್ ಕುಮಾರ್ ನೇತೃತ್ವದ ದ್ವಿ ಸದಸ್ಯ ಪೀಠ ಆದೇಶ ಈ ಹೊರಡಿಸಿದೆ.
2023ರ ಚುನಾವಣೆ ಗೆದ್ದ ಬಳಿಕ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಶಾಸಕ ವಿನಯ್ ಕುಲಕರ್ಣಿ ಬಹುತೇಕ ಜೈಲಿನಲ್ಲೇ ಇದ್ದರು. ಜಾಮೀನು,ಪೆರೋಲ್ ಪಡೆದು ಎರಡೆರಡು ಬಾರಿ ಜೈಲಿನಿಂದ ಹೊರ ಬಂದಿದ್ದರು.
ಕೊಲೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ 2026ರ ಏಪ್ರಿಲ್ 15ರಂದು ವಿನಯ್ ಕುಲಕರ್ಣಿ ಸೇರಿದಂತೆ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿತ್ತು.
ಏಪ್ರಿಲ್ 17ರಂದು ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು. ಮತ್ತೊಬ್ಬ ಆರೋಪಿ ಚನ್ನಕೇಶವ ಟಿಂಗರಿಕರ್ಗೆ ಏಳು ವರ್ಷಗಳ ಶಿಕ್ಷೆ ವಿಧಿಸಲಾಯಿತು.
ವಿಚಾರಣಾ ನ್ಯಾಯಾಲಯ ನೀಡಿದ ಆದೇಶವನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಜುಲೈ 31 ರಂದು ಉಚ್ಛ ನ್ಯಾಯಾಲಯ ಮೇಲ್ಮನವಿ ಇತ್ಯರ್ಥವಾಗುವವರೆಗೆ ಅವರ ಶಿಕ್ಷೆ ಹಾಗೂ ಅಪರಾಧ ನಿರ್ಣಯಕ್ಕೆ ತಡೆ ನೀಡಿ, ಜಾಮೀನು ನೀಡಿತ್ತು.
ಇದರ ಬೆನ್ನಲ್ಲೇ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಮತ್ತು ಯೋಗೇಶಗೌಡ ಸಹೋದರ ಗುರುನಾಥಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಸಿಬಿಐ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ವಾದ ಮಂಡಿಸಿದ್ದರು.
ಗಂಭೀರ ಅಪರಾಧಗಳಲ್ಲಿ ಶಿಕ್ಷೆ ಅಮಾನತುಗೊಳಿಸುವಾಗ ಸುಪ್ರೀಂ ಕೋರ್ಟ್ನ ಹಿಂದಿನ ತೀರ್ಪುಗಳು ಹಾಗೂ ಕಾನೂನು ತತ್ವಗಳನ್ನು ಪಾಲಿಸಬೇಕು. ಕರ್ನಾಟಕ ಹೈಕೋರ್ಟ್ ವಿನಯ್ ಕುಲಕರ್ಣಿ ಅವರ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡಿರುವುದು ಸರಿಯಲ್ಲ ಎಂದು ಅವರು ವಾದ ಮಂಡಿಸಿದ್ದರು
ಶಾಸಕ ವಿನಯ್ ಕುಲಕರ್ಣಿ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದರು.

