ಮೇಕೆದಾಟು ಅಣೆಕಟ್ಟು: ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ತರಾಟೆ

ನವದೆಹಲಿ: ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಅನುಮತಿ ನೀಡದಂತೆ ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಅಲ್ಲಿನ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ಪೀಠವು ಅರ್ಜಿ ವಿಚಾರಣೆ ನಡೆಸಿದ ಸಂದರ್ಭದಲ್ಲಿ ತಮಿಳುನಾಡು ಸರ್ಕಾರದ ವಕೀಲರನ್ನ ಖಾರವಾಗಿ ಪ್ರಶ್ನಿಸಿದೆ. ಹಿರಿಯ ವಕೀಲರು ಲಭ್ಯವಿಲ್ಲ ಎಂಬ ಕಾರಣ ನೀಡಿ ವಿಚಾರಣೆಯನ್ನ ಮುಂದೂಡುವಂತೆ ತಮಿಳುನಾಡು ಸರ್ಕಾರದ ಪರ ವಕೀಲರು ಮನವಿ ಮಾಡಿದ್ದರು.

ಇದೇ ಕಾರಣ ನೀಡಿ ಹಿಂದಿನ ವಿಚಾರಣೆಯಲ್ಲೂ ಮುಂದೂಡಿಕೆ ಕೋರಲಾಗಿತ್ತು. ಪದೇಪದೇ ವಿಚಾರಣೆ ಮುಂದೂಡುವಂತೆ ಮನವಿ ಮಾಡುತ್ತಿರುವುದಕ್ಕೆ ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಇಂತಹ ಅರ್ಜಿಗಳು ನ್ಯಾಯಾಲಯದಲ್ಲಿ ಈಗಾಗಲೇ ಬಾಕಿ ಇರುವ ಪ್ರಕರಣಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಲು ಕಾರಣವಾಗುತ್ತವೆ ಎಂದು ನ್ಯಾಯಪೀಠ ಗರಂ
ಆಯಿತು ಅಲ್ಲದೆ ತಮಿಳುನಾಡು ಸರ್ಕಾರದ ಮುಂದೂಡಿಕೆ ಮನವಿಗೆ ಅಸಮಾಧಾನ ವ್ಯಕ್ತಪಡಿಸಿ, ಪ್ರಕರಣದ ಮುಂದಿನ ವಿಚಾರಣೆಯನ್ನು ಫೆಬ್ರವರಿ 15ಕ್ಕೆ ಮುಂದೂಡಿತು.

ತಮಿಳುನಾಡು ಸರ್ಕಾರಕ್ಕೆ 2ನೇ ಬಾರಿಗೆ ಮುಖಭಂಗವಾಗಿದೆ. ಕರ್ನಾಟಕದಿಂದ ಬಾಕಿ ಇರುವ 11 ಟಿಎಂಸಿ ಹೆಚ್ಚುವರಿ ನೀರನ್ನು ತಕ್ಷಣ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು ಸಲ್ಲಿಸಿದ್ದ ಎರಡು ಮಧ್ಯಂತರ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.