ಮೈಸೂರು: ವರ್ಚುವಲ್ ಮೂಲಕ ದಸರಾ ವೀಕ್ಷಿಸಿ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಜನತೆಗೆ ಕರೆ ನೀಡಿದರು.
ಅರಮನೆ ಆವರಣದಲ್ಲಿ ಶನಿವಾರ ಸಂಜೆ ಏರ್ಪಡಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ವರ್ಚುವಲ್ ಮೂಲಕ ಉದ್ಘಾಟಿಸಿದರು.
ಮೈಸೂರಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಉದ್ಘಾಟಿಸುವ ಮೂಲಕ ವಿದ್ಯುಕ್ತ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಿಎಂ ಅವರು ಮಾತನಾಡಿ, ಅದ್ದೂರಿಯಾಗಿ ಆಚರಿಸಬೇಕಿದ್ದ ಮೈಸೂರು ದಸರಾವನ್ನು ಕೊರೋನಾ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸುತ್ತಿದ್ದೇವೆ. ಇದಕ್ಕೆ ಸಾರ್ವಜನಿಕರ ಸಹಕಾರ ಸಹ ಮುಖ್ಯವಾಗಿದ್ದು, ಜನರು ವರ್ಚುವಲ್ ಮೂಲಕ ದಸರಾ ಕಾರ್ಯಕ್ರಮವನ್ನು ಮನೆಯಲ್ಲೇ ಕುಳಿತು ವೀಕ್ಷಿಸಬೇಕು. ಜೊತೆಗೆ ಕಟ್ಟುನಿಟ್ಟಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದರು.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಮಾತನಾಡಿ, ಮೈಸೂರು ದಸರಾವನ್ನು ಸಾಂಸ್ಕೃತಿಕವಾಗಿ ಹಾಗೂ ಸಂಪ್ರದಾಯಬದ್ಧವಾಗಿ ಆಚರಿಸಲಾಗುತ್ತಿದೆ. ಜೊತೆಗೆ ವರ್ಚುವಲ್ ವ್ಯವಸ್ಥೆ ಮಾಡಿದ್ದು, ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಚಾಮುಂಡಿಬೆಟ್ಟ ಹಾಗೂ ಅರಮನೆ ವೇದಿಕೆಗೆ ಮಾತ್ರ ಸೀಮಿತಗೊಳಿಸಲಾಗಿದೆ. ಕೊರೋನಾ ಆತಂಕದ ಹಿನ್ನೆಲೆಯಲ್ಲಿ ಜನತೆಯ ಆರೋಗ್ಯವೂ ಮುಖ್ಯವಾಗಿದ್ದು, ಜನತೆ ಮನೆಯಲ್ಲೇ ಕುಳಿತು ಕಾರ್ಯಕ್ರಮವನ್ನು ವೀಕ್ಷಿಸಬೇಕಾಗಿ ಕೋರುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಸಂಗೀತ ಲೋಕದ ಸಾಧಕರಾದ ಪಂಡಿತ್ ವಿನಾಯಕ ತೊರವಿ ಅವರಿಗೆ ಪ್ರದಾನ ಮಾಡಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪಂಡಿತ್ ವಿನಾಯಕ ತೊರವಿ, ಸಾಹಿತ್ಯ, ಕಲೆ, ಸಂಸ್ಕೃತಿ ಉಳಿವಿಗೆ ಕರ್ನಾಟಕ ಶ್ರಮಿಸುವಷ್ಟು ಬೇರೆ ಯಾವ ರಾಜ್ಯದಲ್ಲಿಯೂ ಇಲ್ಲ. ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು, ಅದೂ ಧಾರವಾಡದಲ್ಲಿ ಹುಟ್ಟಬೇಕು ಎಂದು ತಿಳಿಸಿದರು.
ಪ್ರಶಸ್ತಿ ಪ್ರದಾನದಲ್ಲಿ ನನಗೆ ಬಂದ 5 ಲಕ್ಷ ರೂಪಾಯಿಯಲ್ಲಿ ಒಂದು ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುತ್ತೇನೆ. ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆಗೆ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಇದು ಪ್ರತಿವರ್ಷದ ಸಮಸ್ಯೆಯಾಗುತ್ತಿದೆ. ಈ ನಿಟ್ಟಿನಲ್ಲಿ ಅಲ್ಲಿನ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕಿದೆ. ಇದಕ್ಕಾಗಿ ನಾನು 1 ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುತ್ತಿದ್ದೇನೆ ಎಂದು ಪಂಡಿತ್ ವಿನಾಯಕ ತೊರವೀರ್ ತಿಳಿಸಿದರು.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಮೇಯರ್ ತಸ್ನೀಂ, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಹರ್ಷವರ್ಧನ್, ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.