ಬೆಳಗಾವಿ: ಪ್ರವಾಹ ಮತ್ತಿತರ ತುರ್ತು ಸಂದರ್ಭಗಳಲ್ಲಿ ಜನರಿಗೆ ಸುರಕ್ಷಿತ ನೆಲೆ ಒದಗಿಸುವುದಕ್ಕಾಗಿ ಬೆಳಗಾವಿ ಜಿಲ್ಲೆಯಲ್ಲಿ ಸುಸಜ್ಜಿತ ಕಾಳಜಿ ಕೇಂದ್ರ ಸ್ಥಾಪನೆಗೆ ಕ್ರಮಕೈಗೊಳ್ಳಲಾಗುವುದು ಎಂದು ಕಂದಾಯ ಇಲಾಖೆ ಸಚಿವ ಆರ್.ಅಶೋಕ್ ತಿಳಿಸಿದರು.
ಹುಕ್ಕೇರಿ ಮತ್ತು ಚಿಕ್ಕೋಡಿ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಸಚಿವ ಅಶೋಕ್ ಅವರು ಸೋಮವಾರ ಭೇಟಿ ನೀಡಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಕಾಳಜಿ ಕೇಂದ್ರದಲ್ಲಿ ಅಡುಗೆ ಕೋಣೆ, ಸ್ನಾನಗೃಹಗಳು, ವಸತಿ ಕೋಣೆಗಳನ್ನು ನಿರ್ಮಿಸಲಾಗುವುದು. ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ಜನರ ಪುನರ್ವಸತಿಗೆ ಅನುಕೂಲ ಆಗಲಿದೆ ಎಂದು ಸಚಿವ ಆರ್.ಅಶೋಕ ಹೇಳಿದರು.
ಸಂತ್ರಸ್ತರಿಗೆ ಪರಿಹಾರ ನೀಡಲು ಹಣದ ಕೊರತೆಯಿಲ್ಲ. ಎಲ್ಲ ಜಿಲ್ಲಾಧಿಕಾರಿಗಳ ಪಿ.ಡಿ.ಖಾತೆಯಲ್ಲಿ ಹಣವಿದೆ ಎಂದರು.
ಮಾರ್ಗಸೂಚಿ ಪ್ರಕಾರ ಪರಿಹಾರ ನೀಡಲಾಗುವುದು. ಎನ್.ಡಿ.ಆರ್.ಎಫ್. ಮಾರ್ಗಸೂಚಿ ಅನ್ವಯ ಪರಿಹಾರ ಕಡಿಮೆ ಬರುವುದರಿಂದ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಹೆಚ್ಚಿನ ನೆರವು ನೀಡಲು ಪ್ರಯತ್ನಿಸಲಾಗುವುದು ಎಂದರು.
ಬಾಕಿ ಉಳಿದಿರುವ ಬೆಳೆ ಪರಿಹಾರ ಹಾಗೂ ಮನೆ ನಿರ್ಮಾಣದ ಕಂತಿನ ಹಣವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಅಶೋಕ್ ಹೇಳಿದರು.
ಇದಕ್ಕೂ ಮುನ್ನ ಜಿಲ್ಲೆಯಲ್ಲಿ ಇತ್ತೀಚಿಗೆ ಅತಿವೃಷ್ಟಿಯಿಂದ ಹಾನಿಹೊಳಗಾಗಿರುವ ಬೆಳೆ ಹಾಗೂ ಮನೆಗಳನ್ನು ಕಂದಾಯ ಇಲಾಖೆಯ ಸಚಿವ ಆರ್.ಅಶೋಕ್ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಚಿವರು ಸಭೆ ನಡೆಸಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಉಂಟಾಗಿರುವ ಹಾನಿಯ ಕುರಿತು ಮಾಹಿತಿ ಪಡೆದುಕೊಂಡು, ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದಂತೆ ತೆಗೆದುಕೊಳ್ಳಲಾದ ಕ್ರಮಗಳ ಪ್ರಗತಿಯನ್ನು ಪರಿಶೀಲಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ, ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಉಮೇಶ್ ಕತ್ತಿ, ದುರ್ಯೋಧನ ಐಹೊಳೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.