ಪುಣಜನೂರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಚಾಲನೆ

ಬೆಂಗಳೂರು: ಚಾಮರಾಜನಗರದಿಂದ ತಮಿಳುನಾಡು ಗಡಿ ಸಂಪರ್ಕಿಸುವ ಪುಣಜನುರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಶನಿವಾರ ಆನ್‍ಲೈನ್ ಮೂಲಕ ಶಂಕುಸ್ಥಾಪನೆ ಮಾಡಿದರು.
ಇದೇ ಸಂದರ್ಭದಲ್ಲಿ ಗಡ್ಕರಿಯವರು ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಿದರಲ್ಲದೇ ಪೂರ್ಣಗೊಂಡ 8 ಹೆದ್ದಾರಿಗಳನ್ನು ಸೇವೆಗೆ ಸಮರ್ಪಿಸಿದರು.
ಚಾಮರಾಜನಗರಿಂದ ಪುಣಜನೂರು ಮಾರ್ಗವಾಗಿ ತಮಿಳುನಾಡು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಚಾಲನೆ ನೀಡಿದರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಪುಣಜನೂರು ರಾಷ್ಟ್ರೀಯ ಹೆದ್ದಾರಿಯ ನಿರ್ಮಾಣ ಕಾಮಗಾರಿಯಿಂದಾಗಿ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿಸಿದಂತಾಗಿದೆ. ಇದರಿಂದ ಜಿಲ್ಲೆಯಲ್ಲಿ ಅಂತರಾಜ್ಯ ವಾಣಿಜ್ಯ ಚಟುವಟಿಕೆಗಳಿಗೆ ಹೆಚ್ಚು ಉತ್ತೇಜನ ಸಿಗುತ್ತದೆ ಎಂದು ಸುರೇಶ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
13.53 ಕೋಟಿ ರೂ. ಅಂದಾಜು ವೆಚ್ಚದ ಈ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಕೇಂದ್ರ ಸಚಿವರು ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು ಎಂದು ಸಚಿವರು ತಿಳಿಸಿದ್ದಾರೆ.
ವರ್ಚ್ಯೂವಲ್ ಮೂಲಕ ನಡೆದ ಈ ಕಾರ್ಯಕ್ರಮದಲ್ಲಿ 1197 ಕಿಮೀ ಉದ್ದದ 10,904 ಕೋಟಿ ವೆಚ್ಚದ 33 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಚಾಲನೆ ಮತ್ತು ಸಮರ್ಪಣೆ ಮಾಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಹಿಸಿದ್ದರು. ಕೇಂದ್ರ ಸಚಿವರಾದ ಡಿ.ವಿ. ಸದಾನಂದಗೌಡ, ಪ್ರಹ್ಲಾದ ಜೋಷಿ, ಜನರಲ್ ವಿ.ಕೆ. ಸಿಂಗ್, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ರಾಜ್ಯದ ಹಲವಾರು ಸಚಿವರು ಹಾಜರಿದ್ದರು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.