ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಡಾ. ಸುಧಾಕರ್ ಕಮಾಲ್ ಮಾಡಿದ್ದಾರೆ.
ನಗರಸಭೆ ಆಡಳಿತವನ್ನು ಪಕ್ಷದ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಬಿಜೆಪಿ ಸಂಘಟನೆಗೆ ಮುನ್ನುಡಿ ಬರೆದಿದ್ದ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ. ಸುಧಾಕರ್ ಪಂಚಾಯಿತಿ ಚುನಾವಣೆಯಲ್ಲೂ ಕಮಾಲ್ ಮಾಡಿದ್ದಾರೆ.
ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದ 29 ಗ್ರಾಮ ಪಂಚಾಯಿತಿಗಳಲ್ಲಿಯೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯ ಗಳಿಸುವ ಮೂಲಕ ಕೇಸರಿ ಧ್ವಜ ಹಾರಿದೆ.
ಇದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ತೀವ್ರ ಮುಖಭಂಗ ಉಂಟಾಗಿದೆ.
ವಿಧಾನಸಭೆ ಕ್ಷೇತ್ರದ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ದೊಡ್ಡ ಪ್ರಮಾಣದಲ್ಲಿ ಪಂಚಾಯಿತಿ ಸ್ಥಾನಗಳಲ್ಲಿ ಗೆದ್ದು ಇತಿಹಾಸ ನಿರ್ಮಿಸಿದೆ.
ಒಂದು ಕಾಲದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಭದ್ರನೆಲೆಯಾಗಿದ್ದ ಚಿಕ್ಕಬಳ್ಳಾಪುರ ಕ್ಷೇತ್ರ ಇದೀಗ ಕೇಸರಿಮಯವಾಗಿದೆ
ಒಂದೆಡೆ ಸಂಘಟನೆ ಬಲಪಡಿಸುವ ಜತೆಗೆ ಪಂಚಾಯಿತಿವಾರು ಬಿರುಸಿನ ಪ್ರವಾಸ ಕೈಗೊಂಡ ಸಚಿವ ಸುಧಾಕರ್ ಹಳ್ಳಿ ಹಳ್ಳಿಗೆ ಭೇಟಿ ನೀಡಿ ತಾವು ಕೈಗೊಂಡಿರುವ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಮುಂದೆ ಕೈಗೊಳ್ಳಲಿರುವ ಯೋಜನೆಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಟ್ಟು ಪ್ರಚಾರ ನಡೆಸಿದ್ದರು.
ಫಲಿತಾಂಶದ ಬಳಿಕ ಪ್ರತಿಕ್ರಿಯೆ ನೀಡಿರುವ ಸಚಿವ ಸುಧಾಕರ್ ಅವರು, ಈ ಗೆಲುವನ್ನು ಪಕ್ಷಕ್ಕಾಗಿ ದುಡಿದಿರುವ ಪ್ರತಿಯೊಬ್ಬ ಕಾರ್ಯಕರ್ತನಿಗೂ ಅರ್ಪಿಸುತ್ತೇನೆ ಎಂದಿದ್ದಾರೆ.
ಪ್ರಧಾನಿ ನರೇಂದ್ರಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಾಯಕತ್ವ ಪಕ್ಷದ ತತ್ವ, ಸಿದ್ಧಾಂತಗಳನ್ನು ಒಪ್ಪಿ ಮತದಾರರು ಅಭೂತಪೂರ್ವ ಬೆಂಬಲ ನೀಡಿದ್ದಾರೆ. ಅವರು ಇಟ್ಟಿರುವ ವಿಶ್ವಾಸಕ್ಕೆ ಚ್ಯುತಿ ಆಗದಂತೆ ಕರ್ತವ್ಯ ನಿರ್ವಹಿಸುವ ಹೊಣೆಗಾರಿಕೆ ಪಕ್ಷದಿಂದ ಬೆಂಬಲ ಪಡೆದು ಗೆಲುವು ಸಾಧಿಸಿರುವ ಪಂಚಾಯಿತಿ ಸದಸ್ಯರ ಮೇಲಿದೆ. ಅವರೆಲ್ಲರ ವಿಶ್ವಾಸದೊಂದಿಗೆ ರಾಜ್ಯಕ್ಕೆ ಚಿಕ್ಕಬಲ್ಳಾಪುರವನ್ನು ಮಾದರಿ ಕ್ಷೇತ್ರವಾಗಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.