ಬದನಗುಪ್ಪೆ ಕೈಗಾರಿಕಾ ಪ್ರದೇಶಕ್ಕೆ 45 ದಿನದೊಳಗೆ ನೀರು ಪೂರೈಸಿ -ಜಗದೀಶ್ ಶೆಟ್ಟರ್

ಚಾಮರಾಜನಗರ: ಚಾಮರಾಜನಗರದ ಹೊರ ವಲಯದ ಕೆಲ್ಲಂಬಳ್ಳಿ-ಬದನಗುಪ್ಪೆ ಕೈಗಾರಿಕ ಪ್ರದೇಶಕ್ಕೆ ನೀರು ಪೂರೈಸುವ ಕಾಮಗಾರಿಯನ್ನು 45 ದಿನದೊಳಗೆ ಪೂರ್ಣಗೊಳಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಅವರು ಅಧಿಕಾರಿಗಳಿಗೆ ಗಡವು ನೀಡಿದರು.
ಚಾಮರಾಜನಗರ ಜಿಲ್ಲೆಯ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶಕ್ಕೆ ಗುರುವಾರ ಭೇಟಿ ನೀಡಿ ಬಳಿಕ ಸಚಿವರು ಸಭೆ ನಡೆಸಿ ಮಾತನಾಡಿದರು.
ಕೆಲ್ಲಂಬಳ್ಳಿ-ಬದನಗುಪ್ಪೆ ಕೈಗಾರಿಕಾ ಪ್ರದೇಶದ ಅಭಿವೃದ್ದಿಗೆ ಸಂಬಂಧಿಸಿದಂತೆ ಯಾವುದೇ ಮೂಲ ಸೌಕರ್ಯಗಳನ್ನು ಒದಗಿಸುವ ಕೆಲಸ ಬಾಕಿ ಉಳಿಸಬಾರದು. ಪ್ರಗತಿಯಲ್ಲಿರುವ ಕಾಮಗಾರಿಯನ್ನು 45 ದಿನದೊಳಗೆ ಮುಗಿಸುವಂತೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬದನಗುಪ್ಪೆ ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶ ಸೇರಿದಂತೆ ಜಿಲ್ಲೆಯ ಇತರೆ ಭಾಗಗಳಲ್ಲಿ ಸಹ ಕೈಗಾರಿಕಾ ಪ್ರದೇಶಗಳಿಗೆ ಪೂರಕವಾಗಿರುವ ನೀರು ಸರಬರಾಜು ಇತರೆ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಸಚಿವರು ತಿಳಿಸಿದರು.
ಚಾಮರಾಜನಗರ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚಿನ ಅವಕಾಶಗಳಿವೆ. ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹಾಗೂ ಬಂಡವಾಳ ಹೂಡಿಕೆಗೆ ಹಲವಾರು ಪ್ರಸ್ತಾವನೆಗಳು ಬಂದಿವೆ. ಈ ಹಿನ್ನಲೆಯಲ್ಲಿ ಜಿಲ್ಲೆಗೆ ಇನ್ನೂ ಹೆಚ್ಚಿನ ಬಂಡವಾಳ ಆಕರ್ಷಣೆಗೆ ಹಾಗೂ ಇಲ್ಲಿರುವ ಅವಕಾಶಗಳ ಬಗ್ಗೆ ಮನದಟ್ಟು ಮಾಡುವ ಉದ್ದೇಶದಿಂದ ತಮಿಳುನಾಡಿನ ಕೊಯಮತ್ತೂರು, ತಿರಪೂರ್ ಹಾಗೂ ಕೇರಳ ರಾಜ್ಯಗಳಲ್ಲಿ ರೋಡ್ ಶೋ ಆಯೋಜಿಸುವುದಾಗಿ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.
ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎನ್. ಮಹೇಶ್, ಸಿ.ಎಸ್. ನಿರಂಜನ್ ಕುಮಾರ್, ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ಕೇಂದ್ರ ಪರಿಹಾರ ಸಮಿತಿಯ ಅಧ್ಯಕ್ಷ ಎಂ. ರಾಮಚಂದ್ರ, ಕೆ.ಐ.ಎ.ಡಿ.ಬಿ ಸಿ.ಇ.ಒ ಡಾ. ಎನ್. ಶಿವಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷಲ್ ಭೋಯರ್ ನಾರಾಯಣ ರಾವ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳಾದ ದಿವ್ಯ ಸಾರಾ ಥಾಮಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.