ಹುಣಸೋಡು ಕಲ್ಲು ಕ್ವಾರಿ ಘಟನೆ: ತನಿಖಾ ಸಮಿತಿ ರಚನೆ ಸಚಿವ ಮುರಗೇಶ್ ನಿರಾಣಿ

ಶಿವಮೊಗ್ಗ: ಜಿಲ್ಲೆಯ ಹುಣಸೋಡು ಬಳಿ ಕಲ್ಲು ಕ್ವಾರಿ ಸಂಭವಿಸಿದ ಘಟನೆಗೆ ಸಂಬಂಧಿಸಿದಂತೆ ಸದ್ಯದಲ್ಲೇ ತನಿಖಾ ಸಮಿತಿ ರಚಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಿದ್ದೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರಗೇಶ್ ನಿರಾಣಿ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಸಚಿವ ಮುರಗೇಶ್ ನಿರಾಣಿ ಶುಕ್ರವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪನವರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಇದಕ್ಕಾಗಿ ತನಿಖಾ ಸಮಿತಿಯನ್ನು ಶೀಘ್ರದಲ್ಲೇ ರಚನೆ ಮಾಡುತ್ತೇವೆ ಎಂದವರು ಹೇಳಿದರು.
ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಅವರು ಎಷ್ಟೇ ಪ್ರಭಾವಿಗಳೇ ಇರಲಿ, ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದ್ದರೂ ಅವರ ವಿರುದ್ಧ ಕ್ರಮ ಜರುಗಿಸಲು ಹಿಂಜರಿಯುವುದಿಲ್ಲ ಎಂದರು.
ಭವಿಷ್ಯದಲ್ಲಿ ಇಂತಹ ಘಟನೆ ನಡೆಯದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಸಚಿವರು ಹೇಳಿದರು.
ಸದ್ಯದಲ್ಲೇ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಕಾನೂನು ಬಾಹಿರವಾಗಿ ಎಲ್ಲೆಲ್ಲಿ ಕ್ವಾರಿಗಳು ನಡೆಸುತ್ತಿದ್ದಾರೋ ಅವುಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲು ಸೂಚನೆ ನೀಡುವುದಾಗಿ ತಿಳಿಸಿದರು.
ನನ್ನ ಅಧಿಕಾರ ಅವಧಿಯಲ್ಲಿ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಇಲ್ಲವೆ ಕಾನೂನು ಬಾಹಿರವಾಗಿ ಕಲ್ಲು ಗಣಿಗಾರಿಕೆ ನಡೆಸಲು ಅವಕಾಶ ಕೊಡುವುದಿಲ್ಲ. ಸರ್ಕಾರದಿಂದ ಅನುಮತಿ ಪಡೆಯದಿದ್ದರೆ ಅಂತವರ ಮೇಲೆ ಕಾನೂನಿನಡಿ ಕ್ರಮ ಕೈಗೊಳ್ಳುತ್ತೆವೆ ಎಂದು ಮುರುಗೇಶ್ ನಿರಾಣಿ ಎಚ್ಚರಿಸಿದರು.
ಈ ಘಟನೆ ಹೇಗೆ ನಡೆಯಿತು? ರಾಜ್ಯಕ್ಕೆ ಜಿಲೆಟಿನ್ ಕಡ್ಡಿಗಳು ಎಲ್ಲಿಂದ ಬಂದವು? ಇದರ ಹಿಂದೆ ಯಾರಿದ್ದಾರೆ? ಸೇರಿದಂತೆ ಎಲ್ಲಾ ಆಯಾಮಗಳಲ್ಲೂ ತನಿಖೆ ಮಾಡಲಾಗುವುದು. ತಪ್ಪಿತಸ್ಥರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದರು.
ಲೈಸೆನ್ಸ್ ಪಡೆದು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದರೆ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆಯಬೇಕು. ಸ್ಫೋಟಕ್ಕೆ ಬಳಸುವ ರಾಸಾಯನಿಕ ವಸ್ತುಗಳನ್ನು ಪರಿಶೀಲಿಸಿದ ಬಳಿಕ ಗುತ್ತಿಗೆ ನೀಡಲಾಗುವುದು. ಇದನ್ನು ತರುವುದಕ್ಕಾಗಿ ಪ್ರತ್ಯೇಕ ವಾಹನ, ಸಂಗ್ರಹಿಸಡಲು ಸ್ಥಳ ಪ್ರತಿಯೊಂದಕ್ಕೂ ನಿಯಮಗಳಿವೆ. ಇದನ್ನು ಇಲ್ಲಿಯವರು ಪಾಲನೆ ಮಾಡಿದ್ದಾರೆ ಎಂಬುದನ್ನು ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದರು.
ಕೆಲವು ಸಂದರ್ಭಗಳಲ್ಲಿ ಅಭಿವೃದ್ದಿ ಕಾರ್ಯಗಳಿಗಾಗಿ ಕಲ್ಲು ಗಣಿಗಾರಿಕೆ ಅಗತ್ಯವಾಗಿರುತ್ತದೆ ಅಧಿಕಾರಿಗಳು ಪರಿಶೀಲನೆ ಮಾಡಿ ಅನುಮತಿ ನೀಡಿರುತ್ತಾರೆ. ಈಗ ಎಲ್ಲೆಲ್ಲಿ ಅನಧಿಕೃತವಾಗಿ ಇಂತಹ ಚಟುವಟಿಕೆಗಳನ್ನು ನಡೆಸಿರುತ್ತಾರೋ ಅವುಗಳ ವಿರುದ್ಧ ಕ್ರಮ ಕೈಗೊಳ್ಳಲು ನೋಟಿಸ್ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಈವರೆಗೂ ಘಟನೆಯಲ್ಲಿ 5 ಮಂದಿ ಮೃತಪಟ್ಟಿದ್ದಾರೆ. ಒಬ್ಬ ವ್ಯಕ್ತಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಚಿವ ಮುರಗೇಶ್ ನಿರಾಣಿ ತಿಳಿಸಿದರು.
ಜಿಲ್ಲಾಧಿಕಾರಿ , ಪೆÇಲೀಸ್ ವರಿಷ್ಠಾಧಿಕಾರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳಿಂದ ಘಟನೆ ಕುರಿತು ಮಾಹಿತಿ ಪಡೆದರು.