ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ -ಎಸ್ ಟಿಎಸ್

ಮೈಸೂರು: ಆಡಳಿತವನ್ನು ಜನರ ಬಳಿಗೆ ಕೊಂಡೊಯ್ದು ಅವರ ಸಮಸ್ಯೆಯನ್ನು ತಳಮಟ್ಟದಿಂದಲೇ ಪರಿಹರಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ತಿಳಿಸಿದರು.
ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಮಂಗಳವಾರ ನಡೆದ 72ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಚಿವರು ಮಾತನಾಡಿದರು.
ಫೆಬ್ರವರಿಯಿಂದ ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲಾಧಿಕಾರಿಗಳು ಸೇರಿದಂತೆ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ, ವಾಸ್ತವ್ಯ ಮಾಡಿ ಜನರ ಸಮಸ್ಯೆಗೆ ಸ್ಪಂದಿಸುತ್ತಾರೆಂದರು.
ಇದರಿಂದ ಹಳ್ಳಿಯ ಜನರು ತಾಲ್ಲೂಕು ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿಗೆ ಅಲೆಯುವುದು ತಪ್ಪುತ್ತದೆಂದರು.
ಮೈಸೂರು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಕೋವಿಡ್-19ರ ಪರಿಸ್ಥಿತಿಯನ್ನು ದಕ್ಷತೆಯಿಂದ ನಿಭಾಯಿಸಿದ್ದೇವೆ. ಮೈಸೂರು ಜಿಲ್ಲೆಗೆ ಈವರೆಗೆ ಸುಮಾರು 42 ಸಾವಿರ ಡೋಸ್ ಲಸಿಕೆ ಬಂದಿದೆ ಎಂದರು.
ಒಂದು ಜಿಲ್ಲೆ ಒಂದು ಉತ್ಪನ್ನ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲೆಯಲ್ಲಿ ಬಾಳೆಯನ್ನು ಆಯ್ಕೆ ಮಾಡಲಾಗಿದೆ. ಜಿಲ್ಲೆಯಲ್ಲಿ 12 ಸಾವಿರ ಹೆಕ್ಟೇರ್ ನಲ್ಲಿ ರೈತರು ಬಾಳೆ ಬೆಳೆಯುತ್ತಿದ್ದಾರೆ. ಈ ಉತ್ಪನ್ನದ ಮೌಲ್ಯವರ್ಧನೆ, ಸಂಸ್ಕರಣೆ, ಪ್ಯಾಕಿಂಗ್, ಬ್ರಾಂಡ್ ಅಭಿವೃದ್ಧಿ, ಮಾರುಕಟ್ಟೆ ಪ್ರೋತ್ಸಾಹಿಸಲು ರೈತರಿಗೆ ತರಬೇತಿ ನೀಡಲಾಗುತ್ತದೆ ಎಂದು ಸಚಿವ ಸೋಮಶೇಖರ್ ತಿಳಿಸಿದರು.
ಮೈಸೂರು ಮಹಾನಗರದಲ್ಲಿ 108 ಕೋಟಿ ರೂ. ವೆಚ್ಚದಲ್ಲಿ ಎಲ್ಲಾ ಬೀದಿ ದೀಪಗಳನ್ನು ಎಲ್.ಇ.ಡಿ. ದೀಪಗಳಾಗಿ ಪರಿವರ್ತಿಸಲು ಸರ್ಕಾರದ ಅನುಮೋದನೆ ದೊರೆತಿದೆ ಎಂದರು.
ಸ್ವಚ್ಛ ಸರ್ವೇಕ್ಷಣ್ ಸಮೀಕ್ಷೆ ನಡೆಯುತ್ತಿದ್ದು, ಮೈಸೂರು ಜನತೆ ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ನಮ್ಮ ನಗರವನ್ನು ಸ್ವಚ್ಛನಗರ ಪಟ್ಟಕ್ಕೇರಿಸಲು ಸಹಕಾರ ನೀಡಬೇಕು ಎಂದು ಸಚಿವರು ಮನವಿ ಮಾಡಿದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಗುಂಪು ವಸತಿ ಮನೆಗಳನ್ನು ನಿರ್ಮಿಸಿ ವಿತರಿಸಲು ಉದ್ದೇಶಿಸಲಾಗಿದ್ದು, ಈ ಯೋಜನೆಯಡಿ 4000 ಮನೆಗಳನ್ನು ನಿರ್ಮಿಸಲಾಗುವುದೆಂದರು.
ಗಣರಾಜ್ಯೋತ್ಸವವನ್ನು ಗೌರವ ಅಭಿಮಾನದಿಂದ ಅರ್ಥಪೂರ್ಣವಾಗಿ ಆಚರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಎಂದರು.