ಮೈಸೂರು: ಸಣ್ಣ ಕೈಗಾರಿಕೆ ಹಾಗೂ ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಿ.ಸಿ. ಪಾಟೀಲ್ ಅವರು ಗುರುವಾರ ಜಿಲ್ಲಾ ಕೈಗಾರಿಕೆ ಕೇಂದ್ರದಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಆತ್ಮನಿರ್ಭರ ಭಾರತ ಯೋಜನೆಯಡಿ ಸಣ್ಣ ಕೈಗಾರಿಕೆಗಳ ಉತ್ತೇಜನಕ್ಕೆ ಕೇಂದ್ರ ಸರ್ಕಾರದಿಂದ ಅನುದಾನ ಪಡೆದುಕೊಳ್ಳಬಹುದು. ಈ ಬಗ್ಗೆ ದೆಹಲಿಗೆ ಭೇಟಿ ನೀಡಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೋದ್ಯಮಕ್ಕೆ ಬಹಳಷ್ಟು ಅವಕಾಶವಿದ್ದು, ಈ ಬಗ್ಗೆ ಇಲಾಖೆಯ ಅಧಿಕಾರಿಗಳು ಕೈಗಾರಿಕೋದ್ಯಮಿಗಳಿಗೆ ಅನುಕೂಲವಾಗುವಂತೆ ಕೈಗಾರಿಕೆ ಪ್ರದೇಶಗಳನ್ನು ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಆಟೋಮೋಟಿವ್ ಎಕ್ಸೆಲ್, ಟಿವಿಎಸ್, ಎಲ್‍ಅಂಡ್‍ಟಿ, ಏಷ್ಯನ್ ಪೈಂಟ್ಸ್ ಸೇರಿದಂತೆ ಅನೇಕ ಕೈಗಾರಿಕೆ ಕೇಂದ್ರಗಳಿಗೆ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳು ವಿವಿಧ ಸರಕನ್ನು ಸರಬರಾಜು ಮಾಡುತ್ತಿವೆ. ಈ ಕೈಗಾರಿಕೋದ್ಯಮಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಅವರಿಗೆ ಇಲಾಖೆ ವತಿಯಿಂದ ಸ್ವಂತ ಕಟ್ಟಡಗಳನ್ನು ನಿರ್ಮಿಸಿ, ಉತ್ಪನ್ನಗಳನ್ನು ಮತ್ತಷ್ಟು ಹೆಚ್ಚಿಸುವಂತೆ ಮಾಡಲು ಚಿಂತಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ನೂತನ ಉದ್ಯಮಿಗಳನ್ನು ಪೆÇ್ರೀತ್ಸಾಹಿಸುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಿ. ಇದಕ್ಕೆ ಅಗತ್ಯವಿರುವ ಜಾಗ ಖರೀದಿ ಹಾಗೂ ಇನ್ನಿತರ ವಿಚಾರಗಳ ಸಂಬಂಧ ಸಮಸ್ಯೆಗಳಿದ್ದರೆ ನನ್ನ ಬಳಿ ಚರ್ಚಿಸಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಲಿಂಗರಾಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ವಿನೋದ್ ಚಂದ್ರ, ಸಹಾಯಕ ನಿರ್ದೇಶಕ ಆರ್.ರಾಜು, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಉಪನಿರ್ದೇಶಕಿ ಮೇಘಲಾ ಇನ್ನಿತರರು ಉಪಸ್ಥಿತರಿದ್ದರು.