ಪ್ಲಾಸ್ಟಿಕ್ ನಿಷೇಧ; ಏ. 5ರಿಂದ ಕಠಿಣ ಕ್ರಮ -ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಪರಿಸರ ರಕ್ಷಣೆ ನಿಟ್ಟಿನಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಹಾಕಲು ಪ್ಲಾಸ್ಟಿಕ್ ನಿಷೇಧಿಸಲಾಗಿದ್ದು, ಏ. 5 ರಿಂದ ಕಡ್ಡಾಯವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಿಳಿಸಿದರು.ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೈಸೂರು ಮಹಾನಗರ ಪಾಲಿಕೆ ಹಾಗೂ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.ಪ್ಲಾಸ್ಟಿಕ್‌ ಬಳಕೆಯಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಈ ಹಿನ್ನೆಲೆ ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಹಾಕಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು.ಮಾರುಕಟ್ಟೆಯಲ್ಲಿನ ಎಲ್ಲಾ ಅಂಗಡಿ ಹಾಗೂ ಇತರ ಪ್ಲಾಸ್ಟಿಕ್‌ ಬಳಸುವ ಸ್ಥಳಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ಪರ್ಯಾಯವಾಗಿ ಕಾಗದ ಹಾಗೂ ಬಟ್ಟೆಯಿಂದ ತಯಾರಿಸಿದ ವಸ್ತುಗಳನ್ನು ಬಳಸಬೇಕು. ಕಾಗದದ ಲೋಟ, ಕಾಗದದ ಚೀಲ, ಬಟ್ಟೆ ಬ್ಯಾಗ್ ಬಳಕೆಯನ್ನು ರೂಢಿಸಿಕೊಳ್ಳಬೇಕು ಎಂದು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ತಿಳಿಸಿದರು.ಪ್ಲಾಸ್ಟಿಕ್‌ಗೆ ಪರ್ಯಾಯವಾದ ವಸ್ತು ಬಳಸಲು ಅವಕಾಶ ನೀಡದೆ ಏಕಾಏಕಿ ದಾಳಿ ಮಾಡಿದರೆ ವ್ಯಾಪಾರಿಗಳಿಗೆ ಮತ್ತು ಗ್ರಾಹಕರಿಗೆ ಇಬ್ಬರಿಗೂ ತೊಂದರೆಯಾಗುತ್ತದೆ. ಆದ್ದರಿಂದ ಒಂದು ತಿಂಗಳ ಗಡುವು ನೀಡಿ ಕಠಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.ಮೊದಲನೇ ಹಂತದಲ್ಲಿ ಮೈಸೂರು ನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧವನ್ನು ಜಾರಿಗೆ ತರಲಾಗುವುದು. ಬಳಿಕೆ ಗ್ರಾಮೀಣ ಪ್ರದೇಶಗಳಲ್ಲಿಯೂ ಸಹ ಪ್ಲಾಸ್ಟಿಕ್ ನಿಷೇಧಿಸಲಾಗುವುದು ಎಂದರು.ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಶಿಲ್ವನಾಗ್, ಅಧೀಕ್ಷಕ ಇಂಜಿನಿಯರ್ ಬಿಳಿಗಿರಿ ರಂಗಸ್ವಾಮಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಶಾದ್ ಆರ್. ಷರೀಫ್, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.