ಬೆಂಗಳೂರು: ಇದು ಜನಪರ ಹಾಗೂ ರೈತಪರ ಬಜೆಟ್ ಆಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್
ಹೇಳಿದರು.
ಸಚಿವರು ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೊನಾ ಸಂಕಷ್ಟ ಕಾಲದಲ್ಲೂ ಆರ್ಥಿಕವಾಗಿ ಚೇತರಿಕೆ
ಸಿಗುವಂತಹ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಮೂಲಕ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ
ಒತ್ತು ಕೊಟ್ಟಿದ್ದಾರೆಂದು ತಿಳಿಸಿದರು.
ಮೈಸೂರು ಭಾಗದ ಬಹುದಿನಗಳ ಬೇಡಿಕೆಯಾಗಿದ್ದ ನೀರು ಸರಬರಾಜು ಹಾಗೂ ಒಳಚರಂಡಿ ಜಾಲವನ್ನು
ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸಿ ನಿರ್ವಹಿಸಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಹೊರವಲಯ ಪ್ರದೇಶವನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯಾಪ್ತಿಗೆ ಸೇರಿಸಲಾಗಿದೆ. ಕಾವೇರಿ ನೀರಾವರಿ ನಿಗಮದ ವತಿಯಿಂದ ಮೈಸೂರು ಜಿಲ್ಲೆಯ ಕಬಿನಿ ಅಣೆಕಟ್ಟೆಯ ಕೆಳಭಾಗದಲ್ಲಿ 50 ಕೋಟಿ ರೂಪಾಯಿ ವೆಚ್ಚದಲ್ಲಿ ಉದ್ಯಾನವನ ಅಭಿವೃದ್ಧಿ ಮಾಡುವುದಾಗಿ
ಘೋಷಣೆ ಮಾಡಿದ್ದು ಸ್ವಾಗತಾರ್ಹ ಕ್ರಮ ಎಂದು ತಿಳಿಸಿದರು.
ಕೊರೊನಾ ಸಂಕಷ್ಟದ ಕಾಲದಲ್ಲಿ ಮುಖ್ಯಮಂತ್ರಿಗಳು ಜನಪರ ಬಜೆಟ್ ಅನ್ನು ಕೊಟ್ಟಿದ್ದು, ಸರ್ವರಿಗೂ ಸಮಪಾಲು-ಸಮಬಾಳು ಎನ್ನುವಂತಹ ಉತ್ತಮ ಯೋಜನೆಗಳನ್ನು ರೂಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿಪಕ್ಷಗಳವರು ಅಭಿವೃದ್ಧಿಗೆ ವಿರೋಧ ವ್ಯಕ್ತಪಡಿಸದೇ, ಜನತೆಗೆ ಅನುಕೂಲ ಮಾಡಿಕೊಡಲು ಸಹಕರಿಸಿ ಎಂದು ಎಸ್.ಟಿ.ಎಸ್. ಹೇಳಿದರು.