ಸಾರ್ವಜನಿಕರು ಕೋವಿಡ್ ಮಾರ್ಗಸೂಚಿ ಪಾಲಿಸುತ್ತಿಲ್ಲ; ಹೀಗಾಗಿ ಸೋಂಕಿನ ಪ್ರಕರಣ ಹೆಚ್ಚಾಗುತ್ತಿದೆ -ಡಾ.ಅಮರ್ ನಾಥ್

ಮೈಸೂರು: ಸಾರ್ವಜನಿಕರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುತ್ತಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣ ಹೆಚ್ಚಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಡಾ.ಅಮರ್ ನಾಥ್ ಹೇಳಿದ್ದಾರೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿವಾರಣೆ ಜಾಗೃತಿ ಜಾಥಾಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಚ್ಚಾಗಿ ಸೋಂಕು ಕಂಡುಬರುತ್ತಿದೆ. ಇಂದಿನಿಂದ ಈಗಾಗಲೇ 15-20 ಸೋಂಕಿನ ಪ್ರಕರಣಗಳು ಬಂದಿರುವ ಶಾಲಾ-ಕಾಲೇಜುಗಳನ್ನು ಸ್ಯಾನಿಟೈಸ್ ಮಾಡಿ 14 ದಿನಗಳ ಕಾಲ ಮುಚ್ಚುತ್ತಿದ್ದೇವೆ ಎಂದವರು ತಿಳಿಸಿದರು.
ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಕೊರೊನಾ ಪರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಲಾಗುವುದು ಎಂದು ಡಾ. ಡಾ.ಅಮರ್ ನಾಥ್ ಹೇಳಿದ್ದಾರೆ.
ಆಡಳಿತ ತರಬೇತಿ ಸಂಸ್ಥೆಯಲ್ಲಿ (ಎಟಿಐ) 5 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಎಟಿಐ ಬಂದ್ ಮಾಡಿಸಿಲ್ಲ. ಅವರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಸಾರ್ವಜನಿಕರು ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಕೋವಿಡ್ ಮತ್ತಷ್ಟು ಹೆಚ್ಚಾಗುವುದನ್ನು ತಡೆಗಟ್ಟಬೇಕು ಎಂದು ಅವರು ಮನವಿ ಮಾಡಿದ್ದಾರೆ.