ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ

ಚಾಮರಾಜನಗರ: ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಶುಕ್ರವಾರದಿಂದ ಭಾನುವಾರದವರೆಗೆ ದೇವಾಲಯದಲ್ಲಿ ಎಣ್ಣೆಮಜ್ಜನ ಸೇವೆ, ಭೀಮನ ಅಮಾವಾಸ್ಯೆಯ ವಿಶೇಷ ಪೂಜೆ ಪುನಸ್ಕಾರಗಳು ನಡೆಯಲಿವೆ. ಶ್ರಾವಣ ಮಾಸದ ಪ್ರಯುಕ್ತ ಸೋಮವಾರ ಬೆಳಿಗ್ಗೆ ಸ್ವಾಮಿಗೆ 108 ಕುಂಭಾಭಿಷೇಕ, ಸಹಸ್ರ ಅಭಿಷೇಕಗಳು ನಡೆಯಲಿವೆ.

ಆ. 6 ರಿಂದ 9ರ ಮಧ್ಯಾಹ್ನ 3 ಗಂಟೆಯವರೆಗೆ ಅರ್ಚಕರು, ಪ್ರಾಧಿಕಾರದ ಅಧಿಕಾರಿಗಳು ಹಾಗೂ ಸಿಬ್ಬಂದಿ, ಕಾರ್ಯನಿಮಿತ್ತ ಬೆಟ್ಟಕ್ಕೆ ಭೇಟಿ ನೀಡುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಬಿಟ್ಟು ಬೇರೆಯಾರಿಗೂ ಪ್ರವೇಶಕ್ಕೆ ಅವಕಾಶ ಇಲ್ಲ.

ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಭೀಮನ ಅಮಾವಾಸ್ಯೆ ಹಾಗೂ ಶ್ರಾವಣ ಮಾಸದ ಅಂಗವಾಗಿ ನಡೆಯುವ ಧಾರ್ಮಿಕ ವಿಧಿವಿಧಾನಗಳ ಸಂದರ್ಭದಲ್ಲಿ ದೇವಾಲಯಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಆದೇಶಿಸಿದ್ದಾರೆ.