ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ವಿಧಾನಸಭೆ ಚುನಾವಣೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಆದರೆ 2023ಕ್ಕೆ ಇನ್ನೂ ಕಾಲವಕಾಶವಿದೆ. ಅಲ್ಲಿವರೆಗೆ ಏನಾಗುತ್ತೋ ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಶುಕ್ರವಾರ ಮತದಾನದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್, ಪಕ್ಷದ ನಿರ್ಧಾರಕ್ಕೆ ನಾವೆಲ್ಲ ಬದ್ದರಾಗಿರುತ್ತೇವೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ವಯಂ ಪ್ರೇರಣೆಯಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಶಾ ಹೇಳಿದ್ದಾರೆ. ಪಕ್ಷದಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ನಮ್ಮ ಅಭಿಪ್ರಾಯಗಳನ್ನು ಪಕ್ಷದ ವೇದಿಕೆಯಲ್ಲಿ ಯಾರಿಗೆ ಹೇಳಬೇಕೋ ಅವರಿಗೆ ಹೇಳಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 6 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂದರು.
ಪತ್ನಿ ಹಾಗೂ ಪುತ್ರನೊಂದಿಗೆ ಜಗದೀಶ ಶೆಟ್ಟರ್ ಅವರು ಮತದಾನ ಮಾಡಿದರು.