ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 15 ಸಾವಿರ ಶಿಕ್ಷಕರನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
2021-22ರ ಶೈಕ್ಷಣಿಕ ವರ್ಷದ ಅವಧಿಯಲ್ಲಿ ಒಟ್ಟು 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ತಾತ್ಕಾಲಿಕವಾಗಿ 23,078 ಅತಿಥಿ ಶಿಕ್ಷಕರ ನೇಮಕಕ್ಕೆ ಈಗಾಗಲೇ ಆದೇಶ ಹೊರಡಿಸಲಾಗಿದೆ. ಇದರ ಜತೆಗೆ ಹೆಚ್ಚುವರಿಯಾಗಿ 4000 ಅತಿಥಿ ಉಪನ್ಯಾಸಕರ ಸೇವೆ ಪಡೆದುಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಸಚಿವರು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ.
2022ರ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಅತಿಥಿ ಉಪನ್ಯಾಸಕರ ಸೇವೆ ಪಡೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 18 ಸಾವಿರ ಅತಿಥಿ ಶಿಕ್ಷಕರು ಮತ್ತು ಪ್ರೌಢಶಾಲೆಗಳಿಗೆ 5078 ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುತ್ತದೆ. ಈ ಸಂಬಂದ ನ.4ರಂದೆ ಆದೇಶ ಹೊರಡಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.