ಅಭಿವೃದ್ಧಿ ನೆಪದಲ್ಲಿ ಅಕ್ರಮ ಗಣಿಗಾರಿಕೆ ನಡೆಸುವರ ವಿರುದ್ಧ ಕಠಿಣ ಕ್ರಮ -ಸಚಿವ ನಿರಾಣಿ

ಯಾದಗಿರಿ: ಅಭಿವೃದ್ಧಿ ನೆಪದಲ್ಲಿ ಅಕ್ರಮ ಗಣಿಗಾರಿಕೆ ನಡೆಸುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು.
ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಚಿವರು ಮಾತನಾಡಿದರು.
ಪ್ರಸಕ್ತ ದಿನಗಳಲ್ಲಿ ರಾಜ್ಯ ಹಾಗೂ ದೇಶದಲ್ಲಿ ಅಭಿವೃದ್ಧಿ ಸಾಧಿಸಲು ಗಣಿಗಾರಿಕೆ ಅವಶ್ಯಕ. ಆದರೆ ಅಭಿವೃದ್ಧಿ ನೆಪದಲ್ಲಿ ಅಕ್ರಮ ಗಣಿಗಾರಿಕೆ ನಡೆಸುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಕಾನೂನು ಚೌಕಟ್ಟಿನಲ್ಲಿಯೇ ಪರಿಸರಕ್ಕೆ ದಕ್ಕೆಯಾಗದಂತೆ ಗಣಿಗಾರಿಕೆಗೆ ಅವಕಾಶ ನೀಡಲಾಗುವುದೆಂದರು.
ಜ. 28ರಂದು ಬೆಂಗಳೂರಿನಲ್ಲಿ ನಾನು ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆದಿದ್ದೇನೆ. ಸಭೆಯಲ್ಲಿ ಚರ್ಚಿಸಿ ಪರಿಸರ ಹಾಗೂ ಮನುಕೂಲಕ್ಕೆ ಗಣಿಗಾರಿಕೆಯಿಂದ ತೊಂದರೆಯಾಗದಂತೆ ಸರ್ಕಾರ ಎಚ್ಚರಿಕೆ ವಹಿಸುವ ಜೊತೆಗೆ ಕಾರ್ಮಿಕರ ಹಿತ ಕಾಪಾಡುತ್ತೇವೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಬಿಎಸ್‍ವೈ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದಾರೆ. ಬರುವ ಬಜೆಟ್‍ನಲ್ಲಿ ಹೆಚ್ಚಿನ ಅನುದಾನ ನೀಡುತ್ತಾರೆ ಎಂಬ ಭರವಸೆ ವ್ಯಕ್ತಪಡಿಸಿದರು.
ರಾಜ್ಯ ಸಚಿವ ಸಂಪುಟದಲ್ಲಿ ಯಾವುದೇ ಅಸಮಧಾನವಿಲ್ಲ. ಎಲ್ಲರೂ ಒಗ್ಗಟ್ಟಾಗಿ ಹಲವಾರು ತೊಂದರೆಗಳ ಮಧ್ಯೆ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕರಾದ ರಾಜುಗೌಡ, ಬಿ.ಜಿ ಪಾಟೀಲ್, ಜಿ.ಪಂ ಅಧ್ಯಕ್ಷ ಬಸನಗೌಡ ಯಡಿಯಾಪೂರ, ಯುಡಾ ಅಧ್ಯಕ್ಷ ಬಸವರಾಜ ಚಂಡ್ರಿಕಿ ಉಪಸ್ಥಿತರಿದ್ದರು.