ಬೆಳಗಾವಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಯೋಜನೆ ಹಾಗೂ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ಜನಪರ ಯೋಜನೆಯನ್ನು ಪಕ್ಷದ ಕಾರ್ಯಕರ್ತರು ಜನರ ಮನೆ ಮನೆಗೆ ಮುಟ್ಟಿಸುವಲ್ಲಿ ಶ್ರಮವಹಿಸಬೇಕು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ಕರೆ ನೀಡಿದರು.
ಬೆಳಗಾವಿ ಬಿಜೆಪಿ ಕಚೇರಿಗೆ ಬುಧವಾರ ಭೇಟಿ ನೀಡಿದ ಸಚಿವರು, ಪ್ರಮುಖ ಪದಾಧಿಕಾರಿಗಳ ಜತೆ ಸಭೆ ನಡೆಸಿ ಮಾತನಾಡಿದರು.
ಈ ಮೂಲಕ ಪಕ್ಷವನ್ನು ಬೇರುಮಟ್ಟದಿಂದ ಗಟ್ಟಿಗೊಳಿಸಬೇಕು ಎಂದು ಸಚಿವ ಸೋಮಶೇಖರ್ ಹೇಳಿದರು.
ಸಹಕಾರಿ ಸಂಘ ಸಂಸ್ಥೆಗಳಲ್ಲಿ ಹಣ ದುರ್ಬಳಕೆಗಳಂತಹ ಪ್ರಕರಣಗಳು ಕಂಡುಬಂದಲ್ಲಿ ನಮ್ಮ ಸರ್ಕಾರ ಸಹಿಸುವುದಿಲ್ಲ. ಯಾರೇ ತಪ್ಪು ಮಾಡಿದ್ದರೂ ಸಹ ಸರ್ಕಾರವು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಿದೆ. ಸಾರ್ವಜನಿಕರ ಒಂದು ರೂಪಾಯಿಯನ್ನೂ ಸಹ ನಷ್ಟವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ. ನಮ್ಮದು ಸಾರ್ವಜನಿಕರ ಪರವಾಗಿ ಮಿಡಿಯುವ ಸರ್ಕಾರವಾಗಿದೆ ಎಂದು ಸಚಿವ ಸೋಮಶೇಖರ್ ತಿಳಿಸಿದರು.
ಇನ್ನು ಸ್ಥಳೀಯ ಚುನಾವಣೆಗಳು ಪ್ರಾರಂಭವಾಗಲಿವೆ. ಪಕ್ಷವು ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರವನ್ನು ಹಿಡಿಯುವತ್ತ ಕಾರ್ಯಕರ್ತರು ಶ್ರಮವಹಿಸಬೇಕು. ಇದು ಕಾರ್ಯಕರ್ತರ ಚುನಾವಣೆ ಆಗಿರುವುದರಿಂದ ನಾಯಕರ ಬೆಂಬಲ ನಿಮಗೆ ಇದ್ದೇ ಇರುತ್ತದೆ ಎಂದು ಸಚಿವರು ಹೇಳಿದರು.