ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಗೆ ವೇಳಾ ಪಟ್ಟಿ ಪ್ರಕಟಿಸಲಾಗಿದ್ದು, ಏ. 26ರಂದು ಮತದಾನ ನಡೆಯಲಿದೆ. ಚುನಾವಣಾ ಪ್ರಕ್ರಿಯೆಗೆ ಜಿಲ್ಲಾಡಳಿತದಿಂದ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಶಿಲ್ಪಾ ನಾಗ್ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಚುನಾವಣೆ ಸಂಬಂಧ ಕೈಗೊಂಡಿರುವ ಸಿದ್ದತೆಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ವಿವರ ನೀಡಿದರು.
ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮಾ. 28ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಏ. 4ರಂದು ಕೊನೆಯ ದಿನವಾಗಿದೆ. ಏ. 5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ. 8ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕಡೆಯ ದಿನವಾಗಿದೆ. ಏ. 26ರಂದು ಮತದಾನ ನಡೆಯಲಿದ್ದು, ಜೂ. 4ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಚುನಾವಣಾ ಪ್ರಕ್ರಿಯೆ ಜೂ. 6ರಂದು ಪೂರ್ಣಗೊಳ್ಳಲಿದೆ. ಚುನಾವಣೆ ನೀತಿ ಸಂಹಿತೆಯು ತಕ್ಷಣದಿಂದಲೇ ಜಾರಿಗೆ ಬಂದಿದ್ದು, ಜೂ. 6ರ ಚುನಾವಣಾ ಪ್ರಕ್ರಿಯೆಯು ಮುಕ್ತಾಯಗೊಳ್ಳುವವರೆಗೂ ಜಾರಿಯಲ್ಲಿರುತ್ತದೆ ಎಂದು ಅವರು ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಾಣಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸ್ವೀಕರಿಸಲಾಗುತ್ತದೆ. ಚಾಮರಾಜನಗರ ಲೋಕಸಭಾ ಕ್ಷೇತ್ರ (ಪ.ಜಾ) ವ್ಯಾಪ್ತಿಗೆ ಹನೂರು, ಕೊಳ್ಳೇಗಾಲ, ಚಾಮರಾಜನಗರ, ಗುಂಡ್ಲುಪೇಟೆ, ಹೆಚ್.ಡಿ. ಕೋಟೆ, ನಂಜನಗೂಡು, ವರುಣ, ಟಿ. ನರಸೀಪುರ ವಿಧಾನಸಭಾ ಕ್ಷೇತ್ರಗಳು ಒಳಪಡಲಿವೆ.
ದಿನಾಂಕ 01-01-2024ಕ್ಕೆ ಅರ್ಹತಾ ದಿನಾಂಕ ನಿಗದಿಪಡಿಸಿ ದಿನಾಂಕ 22-01-2024ರಂದು ಹೊರಡಿಸಿರುವ ಅಂತಿಮ ಮತದಾರರ ಪಟ್ಟಿಯ ಪ್ರಕಾರ ಒಟ್ಟು 8 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 8,69,389 ಪುರುಷರು, 8,88,113 ಮಹಿಳೆಯರು, ಇತರೆ 114 ಮತದಾರರು ಸೇರಿದಂತೆ ಒಟ್ಟು 17,57,616 ಮತದಾರರು ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇದ್ದಾರೆ.
ಒಟ್ಟು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2 ಸಾವಿರ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು ಉಪಯೋಗಿಸಲಾಗುತ್ತಿದ್ದು 1177 ಬ್ಯಾಲೆಟ್ ಯೂನಿಟ್, 1177 ಕಂಟ್ರೋಲ್ ಯೂನಿಟ್ ಹಾಗೂ 1276 ವಿ.ವಿ. ಪ್ಯಾಟ್ಸ್ಗಳನ್ನು ಬಳಸಲಾಗುತ್ತಿದೆ ಎಂದು ಅವರು ಹೇಳಿದರು.
ಜಿಲ್ಲಾ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಪಾಲನೆಗಾಗಿ ಫ್ಲೈಯಿಂಗ್ ಸ್ಕ್ವಾಡ್ (ಎಫ್.ಎಸ್.ಟಿ) 12 ತಂಡಗಳು ಮೂರು ಪಾಳಿಗಳಲ್ಲಿ, ಸ್ಟ್ಯಾಟಿಕ್ ಸರ್ವೈಲೆನ್ಸ್ (ಎಸ್.ಎಸ್.ಟಿ) 13 ತಂಡಗಳು ಮೂರು ಪಾಳಿಗಳಲ್ಲಿ, 97 ಸೆಕ್ಟರ್ ಅಧಿಕಾರಿಗಳು ನಿಯೋಜನೆಯಾಗಿದ್ದಾರೆ. ವೀಡಿಯೋ ಸರ್ವೈಲೆನ್ಸ್ 10 ತಂಡಗಳು, ವೀಡಿಯೋ ವೀವಿಂಗ್ 4 ತಂಡಗಳನ್ನು ಹಾಗೂ ಅಭ್ಯರ್ಥಿಗಳ ಚುನಾವಣಾ ವೆಚ್ಚ ಪರಿಶೀಲನೆಗಾಗಿ ಅಧಿಕಾರಿಗಳ ತಂಡ ನೇಮಕ ಮಾಡಲಾಗಿದೆ. 8 ಅಂತರರಾಜ್ಯ ಚೆಕ್ ಪೋಸ್ಟ್ ಮತ್ತು 5 ಅಂತರ್ ಜಿಲ್ಲಾ ಚೆಕ್ಪೋಸ್ಟ್ಗಳನ್ನು ತೆರೆಯಲು ಕ್ರಮವಹಿಸಲಾಗಿದೆ ಎಂದು ಅವರು ತಿಳಿಸಿದರು.
ಮತದಾರರ ಪಟ್ಟಿಗೆ ಹಾಗೂ ಚುನಾವಣಾ ವಿಷಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ತಿಳಿಸಲು ಜಿಲ್ಲಾಧಿಕಾರಿಗಳ ಕಚೇರಿಯ ಕೊಠಡಿ ಸಂಖ್ಯೆ 104/1 ರಲ್ಲಿ ಮತದಾರರ ಸಹಾಯವಾಣಿ 1950 ಸ್ಥಾಪಿಸಲಾಗಿದೆ. ಈ ಸಹಾಯವಾಣಿಯು 24 x 7 ಅವಧಿಯಲ್ಲಿ ಕಾರ್ಯ ನಿರ್ವಹಿಸಲಿದ್ದು, ಸಾರ್ವಜನಿಕರು ಟೋಲ್ ಫ್ರೀ ಸಂಖ್ಯೆ: 1950ಕ್ಕೆ ಕರೆ ಮಾಡಿ ಮತದಾರರ ಪಟ್ಟಿ, ಮತದಾನ ಮತ್ತು ಚುನಾವಣಾ ವಿಷಯಗಳಿಗೆ ಸಂಬಂಧಿಸಿದಂತೆ ಎಲ್ಲಾ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಅವರು ಹೇಳಿದರು.
ವಿಶೇಷಚೇತನ ಮತದಾರರು ಹೊಸದಾಗಿ ನೋಂದಾವಣೆ ಮಾಡಲು, ವಿಳಾಸ ಬದಲಾವಣೆ ಮಾಡಲು ಇತರೆ ಅಂಶಗಳಲ್ಲಿ ಬದಲಾವಣೆ ಮಾಡಲು ಮತ್ತು ತಮ್ಮನ್ನು ವಿಶೇಷಚೇತನ ಮತದಾರರೆಂದು ಗುರುತಿಸಿಕೊಳ್ಳಲು ಪಿಡಬ್ಲ್ಯೂಡಿ ಆಪ್ ಅಪ್ಲಿಕೇಶನ್ ಬಳಸಬಹುದಾಗಿದೆ. ಈ ತಂತ್ರಾಂಶವನ್ನು ಪ್ಲೇ ಸ್ಟೋರ್ ಮೂಲಕ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.
ಏಕ ಗವಾಕ್ಷಿ ವ್ಯವಸ್ಥೆ ಮೂಲಕ ರಾಜಕೀಯ ಪಕ್ಷಗಳು ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಸಭೆ, ಸಮಾರಂಭ ನಡೆಸಲು ಮತ್ತು ಚುನಾವಣಾ ಪ್ರಚಾರಕ್ಕಾಗಿ ಅನುಮತಿ ನೀಡುವ ಸಂಬಂಧ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಹಾಗೂ ಚಾಮರಾಜನಗರ (ಪ.ಜಾ.) ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಏಕ ಗವಾಕ್ಷಿ ಕೇಂದ್ರ ಸ್ಥಾಪಿಸಲಾಗಿದೆ.
ರಾಜಕೀಯ ಪಕ್ಷಗಳು ಮತ್ತು ಸ್ಪರ್ಧಿಸುವ ಅಭ್ಯರ್ಥಿಗಳ ಪರವಾಗಿ ಮಾಧ್ಯಮಗಳಲ್ಲಿ ಪ್ರಚಾರವಾಗುವ ಚುನಾವಣಾ ವಿಷಯಗಳಿಗೆ ಸಂಬಂಧಿಸಿದಂತೆ ನಿಗಾ ವಹಿಸಲು ಜಿಲ್ಲಾ ಮಟ್ಟದಲ್ಲಿ ಎಂ.ಸಿ.ಎಂ.ಸಿ ತಂಡ ರಚಿಸಲಾಗಿರುತ್ತದೆ. ರಾಜಕೀಯ ಪಕ್ಷಗಳು / ಸ್ಪರ್ಧಿಸುವ ಅಭ್ಯರ್ಥಿಗಳು ದೃಶ್ಯ ಮಾಧ್ಯಮದಲ್ಲಿ ಪ್ರಚಾರ ಕೈಗೊಳ್ಳಲು ಎಂ.ಸಿ.ಎಂ.ಸಿ ಸಮಿತಿಯಿಂದ ಅನುಮತಿ ಪಡೆಯಬೇಕಾಗಿರುತ್ತದೆ ಎಂದು ಅವರು ಹೇಳಿದರು.
ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಯುವ ರಾಯಭಾರಿಗಳನ್ನಾಗಿ ಚಲನಚಿತ್ರ ನಟರಾದ ಕಾರ್ತಿಕ್ ಮಹೇಶ್ ಹಾಗೂ ಚಲನಚಿತ್ರ ನಟರು ಹಾಗೂ ನಿರ್ದೇಶಕರಾದ ನಾಗಭೂಷಣ್, ತೃತೀಯ ಲಿಂಗಿಗಳ ರಾಯಭಾರಿಯಾಗಿ ಸಮತಾ ಸೊಸೈಟಿಯ ಅಧ್ಯಕ್ಷರಾದ ದೀಪಾ ಬುದ್ದೆ ಅವರನ್ನು ನೇಮಕ ಮಾಡಲಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಸುದ್ದಿಗೋಷ್ಠಿಯಲ್ಲಿ ಇದ್ದರು.