ಬೆಂಗಳೂರು:‘ದೇಶದ ಸ್ವಾತಂತ್ರ್ಯಕ್ಕಾಗಿ 2 ವರ್ಷ ಜೈಲು ಸೇರಿ, 16 ವರ್ಷ ದೇಶದ ಪ್ರಧಾನಿಯಾಗಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ನಾಲಿಗೆ ಬಿಗಿ ಹಿಡಿದು ಮಾತನಾಡಲಿ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ ಅವರು ಎಚ್ಚರಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೂಂದಿಗೆ ಮಾತನಾಡಿದರು.
‘ಹುಕ್ಕಾ ಬಾರ್, ಗಾಂಜಾ, ಕುಡಿದು ಗಾಡಿ ಚಲಾಯಿಸಿ ಪ್ರಾಣ ಬಲಿ ಪಡೆಯುವುದು ಸಿ.ಟಿ ರವಿ ಹಾಗೂ ಬಿಜೆಪಿಯವರ ಸಂಸ್ಕೃತಿ’ ಎಂದು ಕಿಡಿಕಾರಿದರು.
‘ಕಾಂಗ್ರೆಸ್ ಪಕ್ಷ ಬಡವರಿಗಾಗಿ ಹಸಿವು ನೀಗಿಸಲು ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಮಾಡಲಾಗಿದೆ. ಆದರೆ ಸಿ.ಟಿ ರವಿ ಅವರು ಇಂದಿರಾಗಾಂಧಿ ಅವರ ಹೆಸರಲ್ಲಿ ಹುಕ್ಕಾ ಬಾರ್ ಬೇಕಾದರೆ ಮಾಡಿಕೊಳ್ಳಲಿ ಎಂದು ಆಡಿರುವ ಮಾತುಗಳು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಇಂದಿರಾ ಗಾಂಧಿ ಅವರ ಹೆಸರನ್ನು ಹೇಳುವ ಯೋಗ್ಯತೆ ಬಿಜೆಪಿ ನಾಯಕರಿಗಿಲ್ಲ’ ಎಂದರು.
‘ಸಿ.ಟಿ ರವಿ ಅವರಿಂದಾಗಲಿ, ಬಿಜೆಪಿಯವರಿಂದಾಗಲಿ ಈ ರಾಜ್ಯ ಹಾಗೂ ದೇಶಕ್ಕೆ ಯಾವುದೇ ಕೊಡುಗೆ ಇಲ್ಲ. ಐಪಿಎಸ್ ಹುದ್ದೆಯಲ್ಲಿದ್ದ ಅಣ್ಣಾಮಲೈ ಅವರನ್ನು ಹುದ್ದೆಯಿಂದ ಬಿಡಿಸಿ ಅವರನ್ನು ಬಿಜೆಪಿಗೆ ಸೇರಿಸಿಕೊಂಡು ಅವರನ್ನು ತಮಿಳುನಾಡು ರಾಜ್ಯಾಧ್ಯಕ್ಷರನ್ನಾಗಿ ಮಾಡಿ ರಾಜ್ಯದ ವಿರುದ್ಧ ನಿಲ್ಲುವಂತೆ ಮಾಡುತ್ತಿರುವುದು ಸಿ.ಟಿ ರವಿ ಅವರೇ’ ಎಂದು ರಾಮಲಿಂಗಾ ರೆಡ್ಡಿ ಅವರು ಹೇಳಿದರು.
ನಂತರ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು, ‘ಸಿ.ಟಿ ರವಿ ಅವರ ಮಾತುಗಳನ್ನು ಕೇಳಿದರೆ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿರುವಂತೆ ಕಾಣುತ್ತಿದೆ. ಅವರ ಭಾಷೆ ಬಳಕೆ ಇದಕ್ಕೆ ಸಾಕ್ಷಿ ಎಂದರು.
‘ಸಿ.ಟಿ ರವಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪಾದದ ಧೂಳಿಗೂ ಸಮರಲ್ಲ. ಬಿಜೆಪಿಯವರು ಇಂತಹ ಹೇಳಿಕೆ ನೀಡಿ ದೇಶ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ತರಲು ಪ್ರಚೋದಿಸುತ್ತಿದ್ದಾರೆಂದರು.
ಸಿ ಟಿ ರವಿ ರಾಜಕೀಯದಲ್ಲಿರಲು ಲಾಯಕ್ಕಿಲ್ಲ ಎಂದರು.
ತಮಿಳುನಾಡಿಗೆ ಹೆದರಿ ಕರ್ನಾಟಕಕ್ಕೆ ಅನ್ಯಾಯ ಎಸಗುತ್ತಿದ್ದಾರೆ. ಸಿ.ಟಿ ರವಿ ಅವರು ತಮಿಳುನಾಡಿನ ಪರವಾಗಿ ವಕಾಲತ್ತು ವಹಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಚಿಕ್ಕಮಗಳೂರು ಜನ ರವಿ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ. ತಮಿಳುನಾಡಿನ ಉಸ್ತುವಾರಿ ಆಗಿರುವ ಕಾರಣ ರವಿ ಅವರು ತಮಿಳುನಾಡಿನ ಪರ ವಕಾಲತ್ತು ವಹಿಸುತ್ತಿದ್ದಾರೆಂದರು ಟೀಕಿಸಿದರು.