ಎತ್ತಿನಹೊಳೆ ಬಗ್ಗೆ ರಾಜ್ಯ ಸರ್ಕಾರ ಬೊಗಳೆ ಬಿಡುತ್ತಿದೆ:ಅಶೋಕ್

ಬೆಂಗಳೂರು: ಎತ್ತಿನಹೊಳೆ ಯೋಜನೆ ಬಗ್ಗೆ ಕಾಂಗ್ರೆಸ್ ಸರ್ಕಾರ ಮತ್ತೊಂದು ಬೊಗಳೆ ಬಿಡುತ್ತಿದೆ ಎಂದು ‌ಪ್ರತಿಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಬಯಲುಸೀಮೆ ಜಿಲ್ಲೆಗಳ ಜನರ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ 2010ರಲ್ಲಿ ಅಂದಿನ‌ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಈ ಎತ್ತಿನಹೊಳೆ ಯೋಜನೆ ರೂಪಿಸಿತ್ತು.

ಈ ಯೋಜನೆಯನ್ನ ಕಾಂಗ್ರೆಸ್ ಸರ್ಕಾರ ಇಂದು ತನ್ನದೇ ಸಾಧನೆ ಎಂದು ಪುಟಗಟ್ಟಲೆ ಜಾಹೀರಾತು ಕೊಟ್ಟು ಪ್ರಚಾರ ಪಡೆಯಲು ಪ್ರಯತ್ನಿಸುತ್ತಿದೆ,ಇದು ಕಾಂಗ್ರೆಸ್ ಪಕ್ಷ ಬೌದ್ಧಿಕವಾಗಿ, ನೈತಿಕವಾಗಿ ಎಷ್ಟು ದಿವಾಳಿ ಆಗಿದೆ ಎನ್ನುವುದಕ್ಕೆ ಮತ್ತೊಂದು ಸಾಕ್ಷಿ ಎಂದು ವ್ಯಂಗ್ಯ ವಾಡಿದ್ದಾರೆ.

2010ರಲ್ಲಿ ಅಂದಿನ ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವರು ಎತ್ತಿನಹೊಳೆ ಯೋಜನೆಯ ಪ್ರಸ್ತಾವನೆಯನ್ನು ಯಡಿಯರಪ್ಪನವರ ಮುಂದಿಟ್ಟಾಗ ಅವರು ತಾತ್ವಿಕ ಒಪ್ಪಿಗೆ ನೀಡಿದ್ದರು.

2012 ರಲ್ಲಜ ಅಂದಿನ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರು ಒಟ್ಟು 8,000 ಕೋಟಿ ರೂಪಾಯಿ ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದರು.

ನಂತರ 2013ರಲ್ಲಿ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 2017ರ ವೇಳೆಗೆ ಯೋಜನೆ ಪೂರ್ಣಗೊಳಿಸುತ್ತೇವೆ ಎಂದು ಮಾತು ಕೊಟ್ಟು, ಬಯಲು ಸೀಮೆ ಜನರಿಗೆ ಮೋಸ ಮಾಡಿದರು ಎಂದು ಅಶೋಕ್ ದೂರಿದ್ದಾರೆ.

ನಂತರ 2022-23ರ ಬಜೆಟ್ ನಲ್ಲಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರ 3,000 ಕೋಟಿ ರೂಪಾಯಿ ಅನುದಾನ ನೀಡಿ ಎತ್ತಿನಹೊಳೆ ಯೋಜನೆಗೆ ವೇಗ ನೀಡಿತ್ತು.

2014ರಲ್ಲಿ 8,500 ಕೋಟಿ ರೂಪಾಯಿ ವೆಚ್ಚದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ಯೋಜನೆಯ ವೆಚ್ಚ ಇದೀಗ 23,251 ಕೋಟಿ ರೂ.ಗೆ ಮುಟ್ಟಿದೆ. ಇದಕ್ಕೆ ಯಾರು ಕಾರಣ ಎಂದು ಅವರು ಪ್ರಶ್ನಿಸಿದ್ದಾರೆ.

ಸುಮಾರು ಆರೂವರೆ ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಗಳಾಗಿದ್ದರೂ ಈ ಯೋಜನೆ ಇಷ್ಟು ವಿಳಂಬವಾಗಲು ಯಾರು ಕಾರಣ ಎಂದು ಅವರು ಕೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನಿಜವಾಗಿಯೂ ಈ ಭಾಗದ ಜನರ ಬಗ್ಗೆ ಬದ್ಧತೆ ಇದ್ದಿದ್ದರೆ ಎತ್ತಿನಹೊಳೆ ಯೋಜನೆಗೆ ಈ ಮೂರು ಜಿಲ್ಲೆಗಳಲ್ಲಿ ಒಂದು ಕಡೆ ಚಾಲನೆ ನೀಡಬೇಕಾಗಿತ್ತು.

ಕಾಂಗ್ರೆಸ್ ಸರ್ಕಾರದ ಬೋಗಸ್ ಗ್ಯಾರೆಂಟಿಗಳ ರೀತಿಯಲ್ಲಿ ಈಗಿನ ಕಾರ್ಯಕ್ರಮವೂ ಒಂದು ಬಿಟ್ಟಿ ಪ್ರಚಾರ ಪಡೆಯುವ ನಾಟಕವಷ್ಟೇ ಎಂದು ಅಶೋಕ್ ಟೀಕಿಸಿದ್ದಾರೆ.