ಇದೇ ನನ್ನ ಕೊನೆಯ ಚುನಾವಣೆ -ಸಿದ್ದರಾಮಯ್ಯ

ಮೈಸೂರು: ಇದೇ ನನ್ನ ಕೊನೆಯ ಚುನಾವಣೆ, ಇದೇ ಕೊನೆಯ ಚುನಾವಣೆ ಹೀಗೆ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಎರಡೆರಡು ಬಾರಿ ಉಚ್ಚರಿಸಿದ್ದಾರೆ.

ಈ ಚುನಾವಣೆಯ ನಂತರ ಚುನಾವಣಾ ರಾಜಕೀಯದಿಂದ ನಿವೃತ್ತಿ ಆಗುತ್ತಿದ್ದೇನೆ. ಹುಟ್ಟೂರಿನ ಕ್ಷೇತ್ರದಿಂದಲೇ ಸ್ಪರ್ಧಿಸಿ ನಿವೃತ್ತಿಯಾಗಬೇಕೆಂಬುದು ನನ್ನ ಮನದಾಸೆಯಾಗಿದೆ ಎಂದು ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳಿಗೆ ಸಿದ್ದು ತಿಳಿಸಿದರು

ಕಳೆದ ಬಾರಿ ಚಾಮುಂಡೇಶ್ವರಿ ಕ್ಷೇತ್ರದ ಬಗ್ಗೆ ನನಗೆ ಸ್ವಲ್ಪ ಅನುಮಾನ ಇತ್ತು, ಹೀಗಾಗಿ ಬಾದಾಮಿ ಕ್ಷೇತ್ರದಲ್ಲೂ ಸ್ಪರ್ಧೆ ಮಾಡಿದ್ದೆ. ಈ ಬಾರಿ ನನಗೆ ಯಾವ ಅನುಮಾನಗಳೂ ಇಲ್ಲ, ವರುಣಾದಿಂದಲೇ ಸ್ಪರ್ಧಿಸುತ್ತೇನೆ ಎಂದು ತಿಳಿಸಿದರು.

ಆದರೆ ಕೋಲಾರದ ಜನರು ಒತ್ತಾಯದಿಂದ ಕರೆಯುತ್ತಿರುವ ಕಾರಣ ಅಲ್ಲೂ ನಿಲ್ಲಲು ಟಿಕೆಟ್ ಕೊಡಿ ಎಂದು ಕೇಳಿದ್ದೇನೆ.

ಅಂತಿಮ ತೀರ್ಮಾನ ಹೈಕಮಾಂಡ್ ಗೆ ಬಿಟ್ಟಿದ್ದು‌ ಎಂದು ತಿಳಿಸಿದರು.

ನನಗೆ ಕ್ಷೇತ್ರ ಇಲ್ಲ ಎನ್ನುವುದೆಲ್ಲಾ ಅರ್ಥವಿಲ್ಲದ ಮಾತು, ನಾನು ಯಾವುದೇ ಕ್ಷೇತ್ರದಿಂದ‌ ಸ್ಪರ್ಧೆ ಮಾಡಿದರೂ ಗೆಲ್ಲುತ್ತೇನೆ ಆ ವಿಶ್ವಾಸ ನನಗಿದೆ ಎಂದು ಹೇಳಿದರು.

ನನಗೆ 25 ಕ್ಷೇತ್ರದಲ್ಲೂ ಗೆಲ್ಲುವ ಅವಕಾಶ ಇರುವ ಕಾರಣ ನನಗೆ ಆಹ್ವಾನಿಸುತ್ತಿದ್ದಾರೆ. ಯಾರಾದ್ರು ಸೋಲುತ್ತಾರೆ ಎಂದರೆ ಆಹ್ವಾನ ಮಾಡುತ್ತಾರಾ ಎಂದು ಮಾಧ್ಯಮದವರನ್ನೇ ಸಿದ್ದು ಪ್ರಶ್ನಿಸಿದರು.

ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಚುನಾವಣೆಗೆ ಕಾಂಗ್ರೆಸ್ ಪಕ್ಷ ಯಾವಾಗಲೂ ಸಿದ್ಧವಿದೆ. ಸಂವಿಧಾನದ ಆಶಯಗಳ ಮೇಲೆ ವಿಶ್ವಾಸವಿದೆ. ಕಾಂಗ್ರೆಸ್ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸುವುದಿಲ್ಲ ಎಂದು ಹೇಳಿದರು.

ನಿಷ್ಪಕ್ಷಪಾತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಯಬೇಕು. ಆ ನಿಟ್ಟಿನಲ್ಲಿ ಚುನಾವಣಾ ಆಯೋಗ ಸೂಕ್ತ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಆಡಳಿತ ಪಕ್ಷದವರು ಹೆಚ್ಚಾಗಿ ಚುನಾವಣಾ ಅಕ್ರಮಗಳನ್ನು ಮಾಡುತ್ತಾರೆ. ಹಾಗಾಗಿ ಅವರ ಮೇಲೆ ಹೆಚ್ಚಿನ ಗಮನ ಇಡಬೇಕು ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.