ಕೈಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಪೂರ್ಣ ಸಹಕಾರ:ಎಂ.ಬಿ.ಪಾಗೆ ಹೆಚ್ ಡಿ ಕೆ ಭರವಸೆ

ನವದೆಹಲಿ: ಕರ್ನಾಟಕದ ಕೈಗಾರಿಕೆ ಅಭಿವೃದ್ಧಿಗೆ ಪೂರ್ಣ ಸಹಕಾರ ನೀಡುವುದಾಗಿ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ರಾಜ್ಯದ ಕೈಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ನವದೆಹಲಿಯ ಉದ್ಯೋಗ ಭವನದಲ್ಲಿರುವ ಭಾರೀ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಭೇಟಿಯಾದ ಕರ್ನಾಟಕದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಈ ಭರವಸೆ ಸಿಕ್ಕುದೆ.

ಕೈಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಅಗತ್ಯ ಸಹಕಾರ ಬೇಕೆಂದು ಎಂ.ಬಿ.ಪಾಟೀಲ್ ಮನವಿ ಮಾಡಿದರು. ಸಚಿವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಹೆಚ್ ಡಿ ಕೆ ಸಂಪೂರ್ಣ ಸಹಕಾರದ ಭರವಸೆ ನೀಡಿದರು.

ಕರ್ನಾಟಕದಲ್ಲಿ ಕೈಗಾರಿಕಾ ಕ್ಷೇತ್ರದ ಸ್ಥಿತಿಗತಿಗಳ ಬಗ್ಗೆ  ಪಾಟೀಲ್ ಅವರಿಂದ ಕುಮಾರಸ್ವಾಮಿ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಕೆಲ ಕೈಗಾರಿಕೆಗಳ ಬಗ್ಗೆ ಮನವಿ ಸಲ್ಲಿಸಿದ ಅವರು; ಕೇಂದ್ರ ಸರ್ಕಾರದಿಂದ ಸಿಗಬೇಕಿರುವ ಒಪ್ಪಿಗೆಯ ಬಗ್ಗೆ ಪ್ರಸ್ತಾವನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಕೈಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡುವ ಅಗತ್ಯವಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಸ್ಪಷ್ಟ ನಿರ್ದೇಶನವಿದೆ. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಕುಮಾರಸ್ವಾಮಿ ಅವರು ಎಂ.ಬಿ.ಪಾಟೀಲ್ ಅವರಿಗೆ ಹೇಳಿದರು.

ರಾಜ್ಯದಲ್ಲಿ ಹೆಚ್ಚು ಹೆಚ್ಚು ಕೈಗಾರಿಕೆಗಳು ಸ್ಥಾಪನೆಯಾಗಬೇಕು ಹಾಗೂ ವಿದೇಶಿ ನೇರ ಬಂಡವಾಳ ಹೂಡಿಕೆ ಹೆಚ್ಚಿನ ಪ್ರಮಾಣದಲ್ಲಿ ಆಗಬೇಕು. ಈ ನಿಟ್ಟಿನಲ್ಲಿ ರಾಜ್ಯಕ್ಕೆ ಪೂರ್ಣ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಹೆಚ್ ಎಂ ಟಿ ಭೂಮಿ ವಿವಾದ ಹಾಗೂ ದೇವದಾರಿ ಗಣಿಗಾರಿಕೆ ಯೋಜನೆಗಳ ಬಗ್ಗೆಯೂ ಕೇಂದ್ರ ಸಚಿವರು ಪಾಟೀಲ್ ಅವರ ಜತೆ ಚರ್ಚೆ ನಡೆಸಿದರು.

ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಸಂಘರ್ಷ ಬೇಡ. ರಾಜಕೀಯ ಮೀರಿ ಅಭಿವೃದ್ಧಿ ಪರವಾಗಿ ಕೆಲಸ ಮಾಡಲು ನಾನು ಮುಕ್ತ ಮನಸ್ಸು ಹೊಂದಿದ್ದೇನೆ, ರಾಜ್ಯದ ಒಳಿತಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಬೇಕು ಎಂದು ಹೆಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದರು.