ಮಂಡ್ಯ: 2 ದಿನದಲ್ಲಿ ಗಣಿ ವಸ್ತುಸ್ಥಿತಿ ವರದಿ ನೀಡಲು ಸಚಿವ ನಿರಾಣಿ ಸೂಚನೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕಾಳೇನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗಣಿಪ್ರದೇಶದ ವಸ್ತುಸ್ಥಿತಿ ಕುರಿತಾಗಿ ಎರಡು ದಿನದೊಳಗೆ ಸಮಿತಿಯನ್ನು ರಚಿಸಿ ಸಮಗ್ರ ವರದಿ ನೀಡುವಂತೆ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾದ ಸುಮಲತಾ ಅಂಬರೀಶ್ ಹಾಗೂ ಜಿಲ್ಲಾಧಿಕಾರಿ ಸೇರಿದಂತೆ ಇಲಾಖೆಯ ಅಧಿಕಾರಗಳ ಜೊತೆ ತಾಲ್ಲೂಕಿನ ಕಾಳೇನಹಳ್ಳಿ ಟಿ.ಎಂ.ಹೊಸೂರು ಸೇರಿದಂತೆ ಸುತ್ತಮುತ್ತಲ ಸ್ಥಳಗಳಲ್ಲಿ ಕಲ್ಲು ಗಣಿಗಾರಿಕೆ ಪರಿಶೀಲನೆ ನಡೆಸಿದರು.
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಚಿವರು ಮಾತನಾಡಿದರು.
ಕಂದಾಯ, ಅರಣ್ಯ, ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಹಭಾಗಿತ್ವದಲ್ಲಿ ಎರಡು ದಿನದೊಳಗೆ ಸಮಿತಿ ರಚನೆ ಮಾಡಿ ವರದಿ ನೀಡಲು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.
ವರದಿ ಬಂದ ಬಳಿಕ ಏನೇನು ಕ್ರಮ ತೆಗೆದುಕೊಳ್ಳಬೇಕು ಎಂಬುದರ ಕುರಿತಾಗಿ ಪರಿಶೀಲಿಸಿ ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗಿವುದೆಂದರು.
ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿರುವ ಇನ್ನಷ್ಟು ಗಣಿಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಲಿದ್ದೇನೆ ಎಂದವರು ತಿಳಿಸಿದರು.
ಯಾವುದೇ ಸಮಸ್ಯೆಗಳಿದ್ದರೂ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದೆಂದು ಸಚಿವ ನಿರಾಣಿ ಹೇಳಿದರು.
ನಾನು ಸಚಿವನಾದ ಮೇಲೆ ಇಲಾಖೆಯಲ್ಲಿ ಕೆಲವು ಹೊಸ ಹೊಸ ಸುಧಾರಣೆಗಳನ್ನು ಜಾರಿ ಮಾಡುವತ್ತ ವಿಶೇಷ ಗಮನ ಹರಿಸಿದ್ದೇನೆ. ಇಲಾಖೆಯನ್ನು ಜನಸ್ನೇಹಿ ಮಾಡುವುದೇ ನನ್ನ ಮುಂದಿನ ಗುರಿಯಾಗಿದೆ ಎಂದು ಹೇಳಿದರು.