ನ್ಯಾಯಾಂಗದ ಮೇಲಿನ ನಂಬಿಕೆ ಉಳಿಸಿ -ನ್ಯಾ. ಸೋಮಶೇಖರ್ ಕರೆ

ಹಾಸನ: ನ್ಯಾಯಾಂಗ ವ್ಯವಸ್ಥೆ ಮೇಲೆ ಜನಸಾಮಾನ್ಯರು ಅಪಾರ ನಂಬಿಕೆ ಹೊಂದಿದ್ದು, ಅದನ್ನು ಉಳಿಸಿಕೊಳ್ಳುವಂತೆ ಎಲ್ಲರೂ ಕಾರ್ಯ ನಿರ್ವಹಿಸಬೇಕೆಂದು ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ಕೆ. ಸೋಮಶೇಖರ್ ಕರೆ ನೀಡಿದರು.
ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ವಕೀಲರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಸಂವಿಧಾನದ ಆಶಯಗಳ ಸಂರಕ್ಷಣೆ ಎಲ್ಲರ ಕರ್ತವ್ಯವಾಗಿದ್ದು, ನ್ಯಾಯಾಂಗ ವ್ಯವಸ್ಥೆಯ ಜವಾಬ್ದಾರಿ ಹೆಚ್ಚಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ವಕೀಲರು ಸಂವಿಧಾನದ ಎಲ್ಲಾ ಅಂಶಗಳನ್ನು ಅಧ್ಯಯನ ಮಾಡಿ ಜನಸಾಮಾನ್ಯರ ಹಕ್ಕುಗಳ ರಕ್ಷಣೆ ಮಾಡುವ ಜೊತೆಗೆ ಕರ್ತವ್ಯಗಳ ಬಗ್ಗೆಯೂ ಅರಿವು ಮೂಡಿಸಬೇಕು ಎಂದರು.
ವಕೀಲರು ಪರಿಶ್ರಮ, ಶ್ರದ್ಧೆ, ಬದ್ದತೆ ಹಾಗೂ ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಹೆಚ್ಚಿನ ಜ್ಞಾನ ಸಂಪಾದಿಸಿ ಜನಸಾಮಾನ್ಯರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎಂದು ಅವರು ತಿಳಿಸಿದರು.
ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಹೆಚ್.ಟಿ ಸಂದೇಶ್, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಿವಣ್ಣ,
ಜಿಲ್ಲಾಧಿಕಾರಿ ಅರ್. ಗಿರೀಶ್, ಪ್ರಭಾರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಹೆಗಡೆ ಅವರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವಕೀಲರ ಸಂಘದ ಅಧ್ಯಕ್ಷ ಶೇಖರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಕಾರ್ಲೆ ಮೊಗಣ್ಣಗೌಡ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಜಿಲ್ಲಾ ಪೆÇೀಲಿಸ್ ವರಿಷ್ಠಾಧಿಕಾರಿ ಶ್ರೀನಿವಾಸ ಗೌಡ, ವಕೀಲರ ಸಂಘದ ಮಾಜಿ ಅಧ್ಯಕ್ಷ ಚಂದ್ರಶೇಖರ್,
ವಕೀಲರ ಸಂಘದ ಪ್ರಮುಖರಾದ ಡಿ.ಅರ್ ಲೋಹಿತಾಶ್ಚ, ಗೀತಾ, ಸಂಧ್ಯಾಶಣೈ ಮತ್ತಿತರರು ಹಾಜರಿದ್ದರು.