ಹುಬ್ಬಳ್ಳಿ: ಬೇರೆ ಬೇರೆ ವಿಷಯ ತಂದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡುವುದನ್ನ ಸಹಿಸೋದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಿಡಿಗೇಡಿಗಳಿಗೆ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.
ಹುಬ್ಬಳ್ಳಿಯ ತಮ್ಮ ನಿವಾಸದ ಬಳಿ ಭಾನುವಾರ ಸಿಎಂ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಹಿನ್ನೆಲೆಯಲ್ಲಿ ಎಲ್ಲರಿಗೂ ಮನವಿ ಮಾಡುತ್ತೇನೆ. ದೇಶ ಭಕ್ತರಿಗೆ ಎಲ್ಲರೂ ಗೌರವ ಕೊಡಬೇಕು. ಅದಕ್ಕಾಗಿಯೇ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ, ಶಿವಾಜಿ ಮಹಾರಾಜರ ಮೂರ್ತಿ ಸ್ಥಾಪನೆ ಮಾಡಿದ್ದೇವೆ ಎಂದರು.
ಆದರೆ ಬೇರೆ ಬೇರೆ ವಿಷಯ ತಂದು ಕಾನೂನು ಸುವ್ಯವಸ್ಥೆಯನ್ನ ಹಾಳು ಮಾಡಬಾರದು. ಏನೇ ಹೇಳುವುದಿದ್ದರೂ ಶಾಂತಿಯುತವಾಗಿ ಹೇಳಬೇಕು. ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆ ಭಂಗ ತರುವುದಕ್ಕೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ಯಾರೇ ಹೋರಾಟ ಮಾಡಿದರೂ, ಕಾನೂನು ಸುವ್ಯವಸ್ಥೆಗೆ ಭಂಗ ಬರದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.