ರಾಯಣ್ಣ ಪ್ರತಿಮೆ ವಿರೂಪ:ಬೆಳಗಾವಿಯಲ್ಲಿ 144 ಸೆಕ್ಷನ್

ಬೆಳಗಾವಿ:ಬೆಳಗಾವಿಯಲ್ಲಿ ನಡೆಯುತ್ತಿರುವ ಅವೇಶನದ ಸಂದರ್ಭದಲ್ಲೇ ದುಷ್ಕರ್ಮಿಗಳು ರಾಯಣ್ಣ ಪ್ರತಿಮೆಯನ್ನು ವಿರೂಪಗೊಳಿಸಿ ದುಷ್ಕೃತ್ಯ ಮೆರೆದಿದ್ದಾರೆ, ಇದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಪುಂಡರು ರಾತ್ರೋರಾತ್ರಿ ಮನೆಗಳ ಮುಂದೆ ನಿಲ್ಲಿಸಿದ್ದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಹಲವು ಸರ್ಕಾರಿ ವಾಹನಗಳನ್ನು ಕೂಡ ಜಖಂಗೊಳಿಸಿದ್ದಾರೆ.

ಬೆಳಗಾವಿಯ ಅನಗೋಳದ ಕನಕದಾಸ ಕಾಲೋನಿಯಲ್ಲಿರುವ ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ಕಿಡಿಗೇಡಿಗಳು ತಡರಾತ್ರಿ ವಿರೂಪಗೊಳಿಸಿದ್ದಾರೆ. ರಾಯಣ್ಣ ಪ್ರತಿಮೆಯನ್ನು ಹಾನಿಗೊಳಿಸಿ ಖಡ್ಗ, ಗುರಾಣಿ ಬೇರೆ ಕಡೆ ಇಟ್ಟು ವಿಕೃತಿ ಮೆರೆದಿದ್ದಾರೆ.

ಬೆಳಗಾವಿಯ ಸಾಂಬಾಜಿ ವೃತ್ತದಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದು, ಎಲ್ಲೆಂದರಲ್ಲಿ  ಬಿಯರ್ ಬಾಟಲ್ ಒಡೆದು ಹಾಕಿ, ಕಲ್ಲು ತೂರಿದ್ದಾರೆ. ಆರು ಪೊಲೀಸ್ ವಾಹನಗಳು, ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಿದ್ದಾರೆ. ಅಲ್ಲದೆ, 20ಕ್ಕೂ ಅಧಿಕ ಕಾರುಗಳ ಗಾಜುಗಳನ್ನು ಪುಡಿಪುಡಿ ಮಾಡಿದ್ದಾರೆ. ಘಟನೆಯಿಂದ ಬೆಳಗಾವಿಯ ಜನ ಕಂಗಾಲಾಗಿದ್ದಾರೆ.

ನಿಷೇಧಾಜ್ಞೆ ಜಾರಿ: ಕಿಡಿಗೇಡಿಗಳ ಅಟ್ಟಹಾಸ ಸಂಬಂಧ ಬೆಳಗಾವಿ ಪೊಲೀಸರು ಈವರೆಗೆ 27 ಆರೋಪಿಗಳನ್ನು ಬಂಧಿಸಿದ್ದಾರೆ.

ಶನಿವಾರ ಬೆಳಗ್ಗೆ 8 ಗಂಟೆಯಿಂದ ಭಾನುವಾರ ಬೆಳಗ್ಗೆ 6 ಗಂಟೆವರೆಗೆ ಬೆಳಗಾವಿಯಲ್ಲಿ 144ನೆ ಸೆಕ್ಷನ್ ಜಾರಿ ಮಾಡಿ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ತಿಳಿಸಿದ್ದಾರೆ.

ನಿಷೇಧಾಜ್ಞೆ ಹಿನ್ನೆಲೆಯಲ್ಲಿ ನಾಲ್ಕು ಜನಕ್ಕಿಂತ ಹೆಚ್ಚು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಪ್ರಚೋದನಾಕಾರಿ ಪೋಸ್ಟರ್ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ಎಚ್ಚರಿಸಿದ್ದಾರೆ.

ಸ್ವಯಂಪ್ರೇರಿತ ದೂರು ದಾಖಲು:  ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆ, ಖಡೆ ಬಜಾರ್, ಮಾರ್ಕೆಟ್ ಪೊಲೀಸ್ ಠಾಣೆಗಳಲ್ಲಿ ಮೂರು ಪ್ರತ್ಯೇಕ ದೂರುಗಳನ್ನು ದಾಖಲು ಮಾಡಿಕೊಳ್ಳಲಾಗಿದೆ.

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ನೂರಾರು ಎಂಇಎಸ್ ಪುಂಡರ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.