ಸೋಮವಾರದಿಂದ ಪ್ರೌಢಶಾಲೆಗಳು ಪ್ರಾರಂಭ: ಹೈ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಸೋಮವಾರದಿಂದ ಪ್ರೌಢಶಾಲೆಗಳು ಆರಂಭಗೊಳ್ಳುತ್ತಿರುವುದರಿಂದ ಹೈ ಅಲರ್ಟ್ ಘೋಷಿಸಲಾಗಿದೆ.

ಈಗಾಗಲೇ ಗೃಹ ಸಚಿವ ಅರಗ ಜ್ಞಾನೇಂದ್ರ ಎಲ್ಲ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಶಾಲಾ ಆವರಣದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗವಾಗದಂತೆ ಮತ್ತು ವಿವಾದಗಳು ಸೃಷ್ಟಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಪೊಲೀಸರ ಜೊತೆ ಸಶಸ್ತ್ರ ಮೀಸಲು ಪಡೆಯನ್ನು ನಿಯೋಜಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.

ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಹೆಚ್ಚಿನ ಭದ್ರತೆಯನ್ನು ಮಾಡಲಾಗುತ್ತಿದೆ. ಈಗಾಗಲೇ ಮಂಗಳೂರು ಹಾಗೂ ಬಾಗಲಕೋಟೆಯಲ್ಲಿ ಶಾಲೆಗಳಲ್ಲಿ ನಡೆದ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುವಂತೆ ಆಯಾ ಶಾಲಾ ಆಡಳಿತಕ್ಕೆ ಕ್ಷೇತ್ರ ಶಿಕ್ಷಣಾಕಾರಿಗಳು ಸುತ್ತೋಲೆ ಹೊರಡಿಸಿದ್ದಾರೆ.

ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಗರ ಪ್ರದೇಶಗಳು ಹಾಗೂ ಗ್ರಾಮೀಣ ಭಾಗಗಳಲ್ಲಿ ಆಯಾ ತಹಸೀಲ್ದಾರ್‍ಗಳು ಭದ್ರತೆಯನ್ನು ನೋಡಿಕೊಳ್ಳಲಿದ್ದು, 100 ಮೀಟರ್ ವ್ಯಾಪ್ತಿಯಲ್ಲಿ ಸ್ಥಳೀಯರಲ್ಲದೆ ಹೊರಗಿನಿಂದ ಬರುವವರನ್ನು ನಿರ್ಬಂಧಿಸಲಾಗುತ್ತಿದೆ.

ಒಟ್ಟಾರೆ ಕಾನೂನು ಸುವ್ಯಸ್ಥೆಯನ್ನು ಕಾಪಾಡುವ ದೃಷ್ಟಿಯಲ್ಲಿ ರಾಜ್ಯ ಸರ್ಕಾರ ಎಲ್ಲ ಸಿದ್ದತೆಗಳನ್ನು ಮಾಡಿಕೊಂಡಿದೆ.

ಅಶಾಂತಿ ಸೃಷ್ಟಿಸುವವರನ್ನು ಮುಲಾಜಿಲ್ಲದೆ ಬಂಧಿಸಲು ಸೂಚನೆ  ನೀಡಲಾಗಿದೆ.