ಸಿಎಂ ತಪ್ಪು ಒಪ್ಪಿಕೊಂಡಂತಾಗಿದೆ -ಅಶೋಕ್

ಬೆಂಗಳೂರು: ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ ಎಂದು ಪ್ರತಿಪಕ್ಷದ ನಾಯಕ‌ ಆರ. ಅಶೋಕ್ ಹೇಳಿದ್ದಾರೆ.

ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನ ಹಿಂತಿರುಗಿಸುವ ನಿರ್ಧಾರ ಮಾಡಿದ್ದು, ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡಂತಾಗಿದೆ ಎಂದು ಅಶೋಕ್ ‌ಟ್ವೀಟ್ ಮಾಡಿದ್ದಾರೆ

ಆದರೆ ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ ಕದ್ದ ಮಾಲನ್ನು ವಾಪಸ್ಸು ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ

ಕೆಟ್ಟ ಮೇಲೆ ಬುದ್ಧಿ ಬಂತು ಎಂಬಂತೆ ಈಗಲಾದರೂ ಸಿದ್ದರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ ಎನ್ನುವುದು ಸಮಾಧಾನಕರ ವಿಷಯ ಎಂದು ಹೇಳಿದ್ದಾರೆ.

ಆದರೆ ಅಡಿಕೆಗೆ ಹೋದ ಮಾನ, ಆನೆ ಕೊಟ್ಟರೂ ಬರುವುದಿಲ್ಲ ಸಿಎಂ ಸಿದ್ದರಾಮಯ್ಯ ನವರೇ. ತಾವು ತನಿಖೆ ಎದುರಿಸಲೇ ಬೇಕು. ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲೇ ಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ ಎಂದು ಅಶೋಕ್ ತಿಳಿಸಿದ್ದಾರೆ.