ವಿರೋಧ ಪಕ್ಷ ಯಾವುದೇ ವಿಚಾರ ಎತ್ತಿದರೂ ಸದನದಲ್ಲಿ ಉತ್ತರ ಕೊಡಲು ಸರ್ಕಾರ ಸಿದ್ಧ:ಸಿಎಂ ಸಿದ್ದರಾಮಯ್ಯ

ಬೆಳಗಾವಿ: ವಿರೋಧ ಪಕ್ಷಗಳು ಯಾವುದೇ ವಿಚಾರ ಎತ್ತಿದರೂ  ಉತ್ತರ ಕೊಡಲು ಸರ್ಕಾರ ಸಿದ್ಧವಿದೆ. ಯಾವುದನ್ನೂ ವಿಳಂಬ ಅಥವಾ ಕಾಲಹರಣ ಮಾಡುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಇವತ್ತಿನವರೆಗೂ ಬರಗಾಲದ ಚರ್ಚೆಯಾಯಿತು, ಇಂದು ಅದಕ್ಕೆ ಉತ್ತರ ನೀಡುತ್ತೇವೆ. ಈಗಾಗಲೇ ಪ್ರಸ್ತಾಪವಾಗಿರುವ ಬಗ್ಗೆ ಉತ್ತರ ನೀಡುತ್ತೇವೆ ಎಂದು ಹೇಳಿದರು.

ಬಿಜೆಪಿ ನಾಯಕರ ಮಧ್ಯೆ ಸಮನ್ವಯದ  ಕೊರತೆಯಿಂದ ಕಲಾಪದ ಸಮಯ  ವ್ಯರ್ಥವಾಗುತ್ತಿದೆ ಎಂದು ಆರೋಪ ಇದೆಯಲ್ಲ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ  ಬಿಜೆಪಿಯೊಳಗೆ ಎಂದಿಗೂ ಸಮನ್ವಯ ಇಲ್ಲವೇ ಇಲ್ಲ. ಅವರು  ಆಪರೇಷನ್ ಕಮಲದ ಮುಖಾಂತರ ಅಧಿಕಾರಕ್ಕೆ ಬಂದಿದ್ದಾರೆ. ನಂತರ ಜನ ಅವರನ್ನು ತಿರಸ್ಕರಿಸಿದ್ದಾರೆ,ಹಾಗಾಗಿ ಸಮನ್ವಯ ಬರಲು ಸಾಧ್ಯವೇ ಇಲ್ಲ. ಅವರಲ್ಲಿ ಎರಡು ಗುಂಪುಗಳಿವೆ ಎಂದು ಸಿದ್ದರಾಮಯ್ಯ ಹೇಳಿದರು.

ಬೆಳಗಾವಿಯಲ್ಲಿ ಮಹಿಳೆಯೊಬ್ಬರ ಮೇಲೆ ದೌರ್ಜನ್ಯವೆಸಗಿರುವವರು ಯಾರೇ ಆಗಿದ್ದರೂ ಅವರ ಮೇಲೆ ಕಠಿಣ  ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಪಂಚಾಮಸಾಲಿ ನಾಯಕರ ಮನವಿಗೆ ಸ್ಪಂದಿಸಿಲ್ಲ ಎಂದು ಸ್ವಾಮೀಜಿಗಳು 13 ರಂದು ಪ್ರತಿಭಟನೆ ಮಾಡುವುದಾಗಿ ಹೇಳಿದ್ದಾರಲ್ಲಾ ಎಂದುದಕ್ಕೆ

ವಿಧಾನಸಭೆ ಅಧಿವೇಶನ ಮುಗಿದ ನಂತರ ಅವರೊಂದಿಗೆ ಚರ್ಚೆ ಮಾಡಲಾಗುತ್ತವೆ ಎಂದು ತಿಳಿಸಲಾಗಿದೆ, ಬೆಳಗಾವಿಯಲ್ಲಿ ಪಂಚಾಮಸಾಲಿ ನಾಯಕರು ಹಾಗೂ ಸ್ವಾಮೀಜಿ ಯವರೊಂದಿಗೆ ಮಾತನಾಡುತ್ತೇನೆ ಎಂದು ಸಿಎಂ ಹೇಳಿದರು.

ಸುವರ್ಣ ಸೌಧದಲ್ಲಿರುವ ಸಾರ್ವರ್ಕರ್ ಫೋಟೋ ತೆಗೆಯುವ ಕುರಿತು ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅದು ವಿಧಾನಸಭಾಧ್ಯಕ್ಷರಿಗೆ ಸಂಬಂಧಿಸಿದ್ದು ಅವರೇ ತೀರ್ಮಾನಿಸುತ್ತಾರೆ ಎಂದು ತಿಳಿಸಿದರು.

ಸರ್ಕಾರ ಪತನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ  ಬಿಜೆಪಿ ಮತ್ತು ಜೆಡಿಎಸ್ ನೀರಿನಿಂದ ತೆಗೆದ ಮೀನಿನಂತೆ ವಿಲಿ ವಿಲಿ ಎಂದು ಒದ್ದಾಡುತ್ತಿದ್ದು, ಭ್ರಮಾಲೋಕದಲ್ಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.